ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಸಲ್ಲಿಕ್ಕೆ

ಬೆಂಗಳೂರು

     ಕಳೆದ 2008 ರಿಂದ 2012ರ ನಡುವೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಸಲ್ಲಿಸಿದ್ದು, ಸಾವಿರಾರು ಕೋಟಿ ರೂ ಅಕ್ರಮ ನಡೆದಿದೆ ಎಂದು ಆರೋಪಿಸಿದೆ.

      ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿನಿಧಿಸುವ ಗಾಂಧಿನಗರ, ಕಾಂಗ್ರೆಸ್ ಶಾಸಕ ಮುನಿರತ್ನ ಅವರ ರಾಜರಾಜೇಶ್ವರಿ ನಗರ ಮತ್ತು ಬಿಜೆಪಿ ಶಾಸಕ ಡಾ: ಅಶ್ವತ್ಥ್ ನಾರಾಯಣ ಅವರ ಮಲ್ಲೇಶ್ವರ ಕ್ಷೇತ್ರದಲ್ಲಿ ಸಾವಿರಾರು ಕೋಟಿ ರೂ ಅಕ್ರಮಗಳು ನಡೆದಿದ್ದು, ಇಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಸಹ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದೆ.

      ವಿಧಾನಸೌಧದಲ್ಲಿಂದು ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಅವರಿಗೆ ವರದಿ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಬಿಎಂಪಿ ಯಲ್ಲಿ ನಡೆದಿದೆ ಎನ್ನಲಾದ 1600 ಕೋಟಿ ರೂ.ಮೊತ್ತದ ಅವ್ಯವಹಾರ ಪ್ರಕರಣದ ಬಗ್ಗೆ ಎರಡು ವರ್ಷಗಳ ಕಾಲ ತನಿಖೆ ನಡೆಸಿ ವರದಿ ಸಲ್ಲಿಸಲಾಗಿದೆ ಎಂದರು.

     ಈ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ಎರಡು ಸಂಪುಟಗಳಲ್ಲಿ ಸಂಪುಟಗಳಲ್ಲಿ ಅಂತಿಮ ವರದಿ ಸಲ್ಲಿಸಿದ್ದೇವೆ. ಮೇಲ್ನೋಟಕ್ಕೆ ಸಾವಿರಾರು ಕೋಟಿ ಅವ್ಯವಹಾರ ನಡೆದಿರುವುದು ಕಂಡು ಬಂದಿದೆ. ಅದರಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದನ್ನು ನಾನು ಬಹಿರಂಗ ಪಡಿಸಲಾರೆ. ವರದಿಯಲ್ಲಿ ಸಮಗ್ರ ವಿವರಣೆ ನೀಡಿದ್ದೇವೆ. ತಪ್ಪಿತಸ್ಥರ ಮೇಲೆ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಶಿಫಾರಸ್ಸು ಮಾಡಿದ್ದೇವೆ ಎಂದರು.

      ಈ ಹಗರಣದ ಬಗ್ಗೆ ತನಿಖೆ ನಡೆಸಲು ಸಿಐಡಿಯಿಂದಲೂ ಸಹ ಸಾಧ್ಯವಾಗಿರಲಿಲ್ಲ. ಈ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದ ನಂತರ ಅದನ್ನು ಸಿಐಡಿಗೆ ವಹಿಸಲಾಗಿತ್ತು. ಆ ತನಿಖಾ ಸಂಸ್ಥೆ ಕೈ ಚೆಲ್ಲಿದ ನಂತರ ತಮ್ಮ ನೇತೃತ್ವದ ಸಮಿತಿ ರಚಿಸಲಾಗಿತ್ತು ಎಂದು ನ್ಯಾಯಮೂರ್ತಿ ನಾಗಮೋಹನ್ ದಾಸ್ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ