ಹಿರಿಯೂರು :
ಹಿರಿಯೂರು ಪುರಸಭೆ, ನಗರಸಭೆಯಾಗಿ ಮೇಲ್ದರ್ಜೆಗೇರಿದ ನಂತರ ಇದೇ ಮೊದಲ ಬಾರಿಗೆ ಇಲ್ಲಿನ ನಗರಸಭೆಗೆ ಚುನಾವಣೆ ಎದುರಾಗಿದೆ.
ಈ ಹಿಂದೆ ಪುರಸಭೆಯಾಗಿದ್ದಾಗ 27 ವಾರ್ಡ್‍ಗಳಿದ್ದವು. ಕ್ಷೇತ್ರ ಪುನರ್ ವಿಂಗಡಣೆ ನಂತರ ವಾರ್ಡ್‍ಗಳ ಸಂಖ್ಯೆ 33ಕ್ಕೇರಿದೆ. ಮೇ.29 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‍ನ 22, ಬಿಜೆಪಿಯ 26, ಜೆಡಿಎಸ್ 8, ಬಿಎಸ್‍ಪಿಯ 1 ಹಾಗೂ 60 ಜನ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 117 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಾಯಕರಿಗೆ ನಗರಸಭೆ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಕಾಂಗ್ರೆಸ್ ಪರವಾಗಿ ಮಾಜಿ ಸಚಿವ ಡಿ.ಸುಧಾಕರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್, ಜಿಲ್ಲಾ ಪಂಚಾಯತ್ ಸದಸ್ಯ ಆರ್. ನಾಗೇಂದ್ರನಾಯ್ಕ್, ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್‍ನ ಕೆಲವು ಅಭ್ಯರ್ಥಿಗಳಿಗೆ ಜೆಡಿಎಸ್ ಪಕ್ಷದವರು ಬೆಂಬಲ ವ್ಯಕ್ತಪಡಿಸಿದ್ದು, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ, ತಾಲ್ಲೂಕು ಅಧ್ಯಕ್ಷ ಶಿವಪ್ರಸಾದ್‍ಗೌಡ ಅಭ್ಯರ್ಥಿಗಳಪರ ಪ್ರಚಾರ ಮಾಡುತ್ತಿದ್ದಾರೆ.
ಮತ್ತೊಂದೆಡೆ ಈಬಾರಿ ನಗರಸಭೆಯಲ್ಲಿ ಕಮಲ ಅರಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಮಾಜಿ ಶಾಸಕರಾದ ಆರ್.ರಾಮಯ್ಯ, ಬಿಜೆಪಿಯ ರಾಜ್ಯಮುಖಂಡರಾದ ಡಿ.ಟಿ.ಶ್ರೀನಿವಾಸ್, ಸ್ಥಳೀಯ ಬಿಜೆಪಿ ಮುಖಂಡರುಗಳಾದ ಎಂ.ಎಸ್.ರಾಘವೇಂದ್ರ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಎಂ.ವಿ.ಹರ್ಷ, ಗೆಲುವಿನ ತಂತ್ರ ಹೆಣೆದಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಾ ತೀವ್ರ ಪ್ರಚಾರ ಕೈಗೊಂಡಿದ್ದಾರೆ. ಇದೇ ಮೇ 29 ರಂದು ಬುಧವಾರ ಚುನಾವಣೆ ನಡೆಯಲಿದ್ದು, ವಿಜಯಲಕ್ಷ್ಮೀ ಯಾವ ಪಕ್ಷದ ಪರ ಒಲಿಯುತ್ತಾಳೆಂಬುದನ್ನು ಕಾದು ನೋಡಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
