ದಾವಣಗೆರೆ:
ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಯು ಉತ್ತಮ ಸಾಧನೆ ಮಾಡಲು ಪ್ರೇರಣೆ ನೀಡಲಿದೆ ಎಂದು ದಾವಣಗೆರೆ ವಿವಿ ಕುಲಪತಿ ಡಾ.ಶರಣಪ್ಪ ವೈಜನಾಥ್ ಹಲಸೆ ಅಭಿಪ್ರಾಯಪಟ್ಟರು.
ನಗರದ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಉತ್ಸವವಾದ `ನಮ್ಮ ದವನ – 2019′ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಂತ್ರಿಕ ಕ್ಷೇತ್ರದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕಾದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕಾದ ಅವಶ್ಯಕತೆ ಇದೆ. ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳ ಮೇಲೆ ಕೌಟುಂಬಿಕ ಜವಾಬ್ದಾರಿ ಇರುವುದಿಲ್ಲ. ಅವರಿಂದ ಕೇವಲ ಕಲಿಕೆಯ ನಿರೀಕ್ಷೆ ಇರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸಮಗ್ರ ಕಲಿಕೆಯತ್ತ ಚಿತ್ತ ಹರಿಸಬೇಕೆಂದು ಕಿವಿಮಾತು ಹೇಳಿದರು.
ಜೆ.ಜೆ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಆಲೂರು ಮಾತನಾಡಿ, ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಕಡ್ಡಾಯ ಆಗಬೇಕು. ಇದರಿಂದ ವಿದ್ಯಾರ್ಥಿಗಳು ಅನಪೇಕ್ಷಿತ ಚಟುವಟಿಕೆಗಳ ಕಡೆ ಆಕರ್ಷಿತರಾಗುವುದು ತಪ್ಪುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಐಟಿ ಕಾಲೇಜಿನ ನಿರ್ದೇಶಕ .ವೈ.ವೃಷಭೇಂದ್ರಪ್ಪ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಲು ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಕ್ರೀಡೆ ಸಹಕಾರಿಯಾಗಿದೆ. ವಿಭಜಿತ ಕುಟುಂಬಗಳಾಗಿರುವ ಮನೆಗಳಲ್ಲಿ ಈಗ ಸರ್ವತೋಮುಖ ಬೆಳವಣಿಗೆ ಆಗುತ್ತಿಲ್ಲ. ಆದ್ದರಿಂದ ಶಿಕ್ಷಣ ಸಂಸ್ಥೆಗಳು ಆ ಕಾರ್ಯ ಮಾಡಬೇಕಾಕದ ಅವಶ್ಯಕತೆ ಇದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಸಿ. ನಟರಾಜ್, ಡೀನ್ ಡಾ. ಹೆಚ್.ಬಿ. ಅರವಿಂದ್, ಕಾಲೇಜಿನ ಪ್ರಾಧ್ಯಾಪಕರಾದ ಡಾ ಜಿ.ಪಿ.ದೇಸಾಯಿ, ಡಾ.ಕೆ.ಸಿ.ದೇವೇಂದ್ರಪ್ಪ, ಎಂ.ಸಿ.ಪಟೇಲ್, ಡಾ. ಜಿ.ಮಾನವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
