ಬೆಂಗಳೂರು
ರಾಜ್ಯಸರ್ಕಾರ ಪರಿಶಿಷ್ಟ ಜಾತಿ/ವರ್ಗದವರಿಗೆ ರೂಪಿಸಿರುವ ಯೋಜನೆಗಳ ಬಗ್ಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಅಧ್ಯಕ್ಷ ಡಾ. ರಾಮ್‍ಶಂಕರ್ ಕಠಾರಿಯಾ ಮತ್ತು ಆಯೋಗದ ಉಪಾಧ್ಯಕ್ಷರು, ಸದಸ್ಯರುಗಳು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ ಅವರು, ಪರಿಶಿಷ್ಟ ಜಾತಿಯವರನ್ನು ಅತಿ ಹೆಚ್ಚು ಸಾಕ್ಷರನ್ನಾಗಿ ಮಾಡಿರುವ ರಾಜ್ಯ ಕರ್ನಾಟಕ ಎಂದು ಪರಿಶಿಷ್ಟ ಜಾತಿ ಆಯೋಗದ ರಾಷ್ಟ್ರೀಯ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿ ದ್ದಾರೆ ಎಂದರ ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಅಧ್ಯಕ್ಷರು ಕೆಲ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಅಗತ್ಯಕ್ರಮ ಕೈಗೊಳ್ಳಲಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯು ರಾಷ್ಟ್ರಕ್ಕೆ ಮಾದರಿಯಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಶಿಕ್ಷಣ ಕ್ಷೇತ್ರಕ್ಕೂ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂಬುದನ್ನು ಪರಿಶಿಷ್ಟ ಜಾತಿ ಆಯೋಗದ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರಲಾಗಿದೆ ಎಂದರು.
ಸ್ವಯಂ ಉದ್ಯೋಗ, ಕೌಶಲ್ಯಾಭಿವೃದ್ಧಿ, ನೀರಾವರಿ, ಭೂ ಒಡೆತನ ಸೇರಿದಂತೆ ಅನೇಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಹಾಗೆಯೇ, ಎಸ್‍ಟಿಪಿ ಮತ್ತು ಟಿಎಸ್‍ಪಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಈ ಸಮುದಾಯ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂಬುದನ್ನು ಈ ಸಭೆಯಲ್ಲಿ ಮನವರಿಕೆ ಮಾಡಿಕೊಡಲಾಯಿತು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
