ಗುಬ್ಬಿ
ಇತ್ತೀಚಿನ ದಿನಗಳಲ್ಲಿ ಜಾಗತಿಕ ತಾಪಮಾನ ಹೆಚ್ಚುತ್ತಿದ್ದು ಪರಿಸರದ ಮೇಲೆ ತೀವ್ರತರ ಪರಿಣಾಮ ಬೀರುತ್ತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಮ್ಮ ಅಮೂಲ್ಯವಾದ ಪರಿಸರವನ್ನು ಸಂರಕ್ಷಿಸುವುದರ ಜೊತೆಗೆ ತಮ್ಮ ಸುತ್ತಮುತ್ತಲು ಗಿಡಮರಗಳನ್ನು ಬೆಳೆಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ಉಪನ್ಯಾಸಕ ಡಾ:ಕಾ.ಬೂ.ಶ್ರೀನಿವಾಸ್ ತಿಳಿಸಿದರು.
ತಾಲ್ಲೂಕಿನ ಅಮ್ಮನಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಏರ್ಪಡಿಸಿದ್ದ ಪರಿಸರ ಜಾಗೃತಿ ಮತ್ತು ಪರಿಸರ ಸಂರಕ್ಷಣೆ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಮೂಲ್ಯವಾದ ಅರಣ್ಯ ಸಂಪತ್ತು ನಾಶವಾಗುತ್ತಿದ್ದು ಬಿಸಿಲಿನ ತಾಪಮಾನ ದಿನದಿನಕ್ಕೆ ಹೆಚ್ಚಳವಾಗುತ್ತಿದೆ. ಹೆಚ್ಚುತ್ತಿರುವ ತಾಪಮಾನ ಕಡಿಮೆ ಮಾಡಬೇಕಾದರೆ ಅರಣ್ಯ ಸಂಪತ್ತನ್ನು ಹೆಚ್ಚಿಸಬೇಕಿದೆ ಎಂದು ತಿಳಿಸಿದರು.
ಪರಿಸರ ಸಂರಕ್ಷಣೆ ಬಗ್ಗೆ ಸಮಗ್ರವಾದ ಮಾಹಿತಿ ಮತ್ತು ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಅತ್ಯಗತ್ಯವಿದ್ದು ಪ್ಲಾಸ್ಟಿಕ್ ಬಳಕೆ ನಿಷೇಧಿಸುವುದು ಸೇರಿದಂತೆ ಮಳೆನೀರನ್ನು ಸಂಗ್ರಹಿಸಿ ಪುನರ್ ಬಳಕೆ ಮಾಡುವ ವಿಧಾನಗಳನ್ನು ಅಳವಡಿಸಿಕೊಳ್ಳಬೇಕಿದೆ. ಒಂದು ಮರ ಕಡಿದರೆ ಹತ್ತು ಗಿಡ ನೆಡುವಂತಹ ಮನೋಭಾವ ಬೆಳೆಸಿಕೊಂಡಾಗ ಮಾತ್ರ ವಿನಾಶದಂಚಿಗೆ ತಲುಪಿರುವ ನಮ್ಮ ಪರಿಸರವನ್ನು ಸಂರಕ್ಷಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಶಾಲೆಗಳಲ್ಲಿನ ಇಕೋಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆ ಸೇರಿದಂತೆ ಅಮೂಲ್ಯವಾದ ಗಿಡಮರಗಳು, ಪ್ರಾಣಿ ಪಕ್ಷಿಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನಮ್ಮ ಪರಿಸರ ಮತ್ತು ಹೆಚ್ಚುತ್ತಿರುವ ತಾಪಮಾನವನ್ನು ತಡೆಗಟ್ಟುವತ್ತ ಜಾಗೃತಿವಹಿಸಬೇಕಿದೆ ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ಎಸ್.ಆರ್.ರುದ್ರೇಶ್ ಮಾತನಾಡಿ ಪರಿಸರ ಸಂರಕ್ಷಣೆಯಿಂದ ಮಾತ್ರ ಏರುತ್ತಿರುವ ತಾಪಮಾನ ಕಡಿಮೆ ಮಾಡಲು ಸಾಧ್ಯವಿದ್ದು, ಪ್ರತಿಯೊಬ್ಬರೂ ಅಮೂಲ್ಯವಾದ ಅರಣ್ಯ ಸಂಪತ್ತನ್ನು ಉಳಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರುಗಳಾದ ಎನ್.ಹೆಚ್.ಗಿರಿರಾಜು, ಬಿ.ಮಹಾಲಿಂಗಯ್ಯ, ಎನ್. ಆರ್.ನಟರಾಜು, ಎ.ಎಲ್.ಪ್ರಸನ್ನ, ಸಿ.ರಮೇಶ್, ಸಂಜೀವಯ್ಯ, ಜಯಶ್ರೀಯಂಡೀಗೇರಿ, ಚಿ.ಚೇತನ ಮುಂತಾದವರು ಭಾಗವಹಿಸಿದ್ದರು.