ಚಿತ್ರದುರ್ಗ:
ಚಿತ್ರದುರ್ಗ ಕ್ಷೇತ್ರದ ಲೋಕಸಭಾ ಚುನಾವಣೆಗೆ ಮಾ. 19 ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಜಿಲ್ಲೆಯಲ್ಲಿ ಮುಕ್ತ, ನ್ಯಾಯ ಸಮ್ಮತ ಚುನಾವಣೆಗೆ ಕೈಗೊಳ್ಳಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದರು.
ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಕೈಗೊಳ್ಳಲು ಜಿಲ್ಲೆಯಲ್ಲಿ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈಗಾಗಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ನೀತಿ ಸಂಹಿತೆ ಕುರಿತು ನಿಗಾ ವಹಿಸಲು ಎಲ್ಲ ತಂಡಗಳು ಕಾರ್ಯ ಪ್ರವೃತ್ತವಾಗಿವೆ. ಚುನಾವಣೆಗೆ ಮಾ. 19 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು
ನಾಮಪತ್ರ ಸಲ್ಲಿಕೆಗೆ ಮಾ. 26 ಕೊನೆಯ ದಿನವಾಗಿದೆ. ಮಾ. 27 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ಉಮೇದುವಾರಿಕೆ ಹಿಂಪಡೆಯಲು ಮಾ. 29 ಕೊನೆಯ ದಿನವಾಗಿರುತ್ತದೆ. ಮತದಾನ ಏ. 18 ರಂದು ನಡೆಯಲಿದ್ದು ಮತಗಳ ಎಣಿಕೆ ಕಾರ್ಯ ಮೇ. 23 ರಂದು ಜರುಗಲಿದೆ. ಚುನಾವಣಾ ಪ್ರಕ್ರಿಯೆಯನ್ನು ಮೇ. 27 ರ ಒಳಗಾಗಿ ಪೂರ್ಣಗೊಳಿಸಬೇಕಿದೆ ಎಂದರು.
ನಾಮಪತ್ರಗಳನ್ನು ಮಾ. 19 ರಿಂದ 26 ರವರೆಗೆ, ಮಾ. 24 ರ ಸಾರ್ವತ್ರಿಕ ರಜೆ ಹೊರತುಪಡಿಸಿ, ಪ್ರತಿದಿನ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸ್ವೀಕರಿಸಲಾಗುವುದು. ನಾಮಪತ್ರವನ್ನು ನಮೂನೆ 2ಎ ನಲ್ಲಿ ಸಲ್ಲಿಸಬೇಕು. ಕ್ಷೇತ್ರವು ಪ.ಜಾತಿಗೆ ಮೀಸಲಿದ್ದು, ಠೇವಣಿ ಮೊತ್ತ 12500 ರೂ. ನಿಗದಪಡಿಸಲಾಗಿದೆ. ಪ್ರತಿ ಅಭ್ಯರ್ಥಿಗೆ ಗರಿಷ್ಠ 70 ಲಕ್ಷದವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶ ಇದೆ ಎಂದು ಹೇಳಿದರು
ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಗಳ ಕಚೇರಿ 100 ಮೀ. ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಕಚೇರಿ ಆವರಣದೊಳಗೆ ಮೂರು ವಾಹನಗಳಿಗೆ ಮಾತ್ರ ಅವಕಾಶವಿದ್ದು, ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಕಚೇರಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು. ಕಚೇರಿ ಆವರಣದಲ್ಲಿ ಅಗತ್ಯ ಸ್ಥಳಗಳಲ್ಲಿ ಸಿ.ಸಿ. ಟಿ.ವಿ. ಕ್ಯಾಮೆರಾ ಅಳವಡಿಸಲಾಗುವುದು ಎಂದರು.
8933 ಲೀ. ಅಕ್ರಮ ಮದ್ಯ ವಶ : ಜಿಲ್ಲೆಯಲ್ಲಿ ನೀತಿ ಸಂಹಿತೆ ಕಟ್ಟು ನಿಟ್ಟಾಗಿ ಜಾರಿಗೆ ತರಲು ಎಲ್ಲ ಬಗೆಯ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದ್ದು, ಅಕ್ರಮ ಮದ್ಯ ಸಾಗಾಣಿಕೆಗೆ ಅಬಕಾರಿ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ. ಅಲ್ಲಲ್ಲಿ ದಾಳಿ ನಡೆಸಲಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ 8934 ಲೀ. ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 53. 08 ಲಕ್ಷ ರೂ. ಅಂದಾಜಿಸಲಾಗಿದೆ.
ಚುನಾವಣೆಗಾಗಿ ಅಕ್ರಮ ಹಣ, ಸಾಮಗ್ರಿ ಸಾಗಣೆಗಳ ಬಗ್ಗೆ ನಿಗಾ ವಹಿಸಲು ಜಿಲ್ಲೆಯಲ್ಲಿ 40 ಚೆಕ್‍ಪೋಸ್ಟ್‍ಗಳನ್ನು ಪ್ರಾರಂಭಿಸಿದ್ದು, ಹಗಲು ರಾತ್ರಿ ಸರದಿ ಆಧಾರದಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಮಾ. 13 ರಂದು ಹೊಸದುರ್ಗದ ಗಡಿ ಅಹ್ಮದ್ ನಗರ ಚೆಕ್‍ಪೋಸ್ಟ್‍ನಲ್ಲಿ 50 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಇದುವರೆಗೂ ಅಬಕಾರಿಗೆ ಸಂಬಂಧಿಸಿದಂತೆ 119 ಹಾಗೂ ಪೊಲೀಸ್ ಇಲಾಖೆಯಿಂದ 23 ಸೇರಿದಂತೆ ಒಟ್ಟು 142 ಮೊಕದ್ದಮೆ ದಾಖಲಿಸಿ, ಎಫ್‍ಐಆರ್ ದಾಖಲಿಸಲಾಗಿದೆ ಎಂದರು.
ಮತದಾರರು :
ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಂತೆ 2166 ಮತಗಟ್ಟೆಗಳಿದ್ದು, ಪುರುಷ- 884150, ಮಹಿಳೆ-863735, ಒಟ್ಟು 1747885 ಮತದಾರರಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ 1653 ಮತಗಟ್ಟೆಗಳು, ಪುರುಷ-674513, ಮಹಿಳೆ-664735, ಒಟ್ಟು- 1339248 ಮತದಾರರು ಇದ್ದಾರೆ ಎಂದರು.
ಜಿಲ್ಲಾ ರಕ್ಷಣಾಧಿಕಾರಿ ಡಾ. ಅರುಣ್ ಅವರು ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆಯವರೆಗಿನ ಅವಧಿಯಲ್ಲಿ ಧ್ವನಿ ವರ್ಧಕಗಳ ಬಳಕೆಗೆ ಅವಕಾಶವಿಲ್ಲ. ಇದನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮಗಳು, ಮೆರವಣಿಗೆಗೆ ಅನುಮತಿ ನೀಡುವಾಗ, ಮಾರ್ಗ ಹಾಗೂ ಸಮಯವನ್ನು ಪೊಲೀಸ್ ಇಲಾಖೆಯೇ ನಿಗದಿಪಡಿಸುತ್ತದೆ ಎಂದರು. ಅಪರ ಜಿಲ್ಲಾಧಿಕಾರಿ ಸಂಗಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ