ಚಿತ್ರದುರ್ಗ
ಲೋಕಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಚಿತ್ರದುರ್ಗದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಬುಧವಾರದಂದು ಅಚ್ಚುಕಟ್ಟಾಗಿ ನೆರವೇರಿತು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 283 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮತದಾನ ಸಹಾಯಕರು ಸೇರಿದಂತೆ ಒಟ್ಟು 1304 ಸಿಬ್ಬಂದಿಗಳನ್ನು ಮತದಾನ ಪ್ರಕ್ರಿಯೆ ಕೈಗೊಳ್ಳುವ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಇಲ್ಲಿನ ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಆವರಣದಲ್ಲಿ ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ಮತಗಟ್ಟೆಗಳಿಗೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಕಾಲೇಜು ಆವರಣದಲ್ಲಿ ಸೇರತೊಡಗಿದರು. ಇದರ ಜೊತೆಗೆ ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್‍ಗಾಗಿ ನಿಯೋಜಿತಗೊಂಡಿರುವ ಪೊಲೀಸರು ಕೂಡ ಆಗಮಿಸಿದ್ದರು.
ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ಕರೆದುಕೊಂಡು ಹೋಗಲು ಬಸ್, ಕ್ರೂಸರ್ ಹಾಗೂ ಜೀಪ್‍ಗಳು ಕಾಲೇಜು ಆವರಣದಲ್ಲಿ ಸಾಲಾಗಿ ಜಮಾವಣೆಗೊಂಡಿದ್ದವು. ಚಿತ್ರದುರ್ಗ ಕ್ಷೇತ್ರದಲ್ಲಿ ಇದಕ್ಕಾಗಿ 57 ಮಾರ್ಗಗಳನ್ನು ಗುರುತಿಸಿ, 45 ಬಸ್‍ಗಳು, 12 ಮಿನಿಬಸ್ ಹಾಗೂ 03 ಮ್ಯಾಕ್ಸಿಕ್ಯಾಬ್/ ಜೀಪ್‍ಗಳನ್ನು ಬಳಕೆ ಮಾಡಲಾಗಿದೆ. ಕಾಲೇಜು ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ ಹಾಗೂ ಬಸ್ ಗಳ ವಿವರವನ್ನು ಧ್ವನಿವರ್ಧಕ ಮೂಲಕ ತಿಳಿಸುವ ವ್ಯವಸ್ಥೆ ಮಾಡಲಾಗಿತ್ತು.
ಇನ್ನೊಂದೆಡೆ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್ ಬ್ಯಾಗ್ ಅನ್ನು ವಿತರಿಸಲು ಸೆಕ್ಟರ್‍ವಾರು ಕೊಠಡಿಗಳನ್ನು ಸ್ಥಾಪಿಸಿ, ಆ ಮೂಲಕ ಸಂಬಂಧಪಟ್ಟ ಮತಗಟ್ಟೆಗಳ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲಾಯಿತು. ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು.
ಸ್ಥೈರ್ಯ ತುಂಬಿದ ಡಿಸಿ :
ಚಿತ್ರದುರ್ಗದಲ್ಲಿ ಮಸ್ಟರಿಂಗ್ ಕಾರ್ಯ ಜರುಗಿದ ಕಾಲೇಜು ಆವರಣಕ್ಕೆ ಬೆಳಿಗ್ಗೆಯೇ ಆಗಮಿಸಿದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು, ಮಸ್ಟರಿಂಗ್ ಕಾರ್ಯದ ಸಮಗ್ರ ವಿವರವನ್ನು ಪಡೆದುಕೊಂಡರು, ಚುನಾವಣಾ ಸಾಮಗ್ರಿಯನ್ನು ಜೋಡಿಸಿಕೊಳ್ಳಲು ಸಿಬ್ಬಂದಿಗಳಿಗೆ ಕೊಠಡಿಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈ ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಮಾತನಾಡಿ, ಯಾವುದೇ ಆತಂಕವಿಲ್ಲದೆ, ಧೈರ್ಯದಿಂದ ಹಾಗೂ ಪ್ರಾಮಾಣಿಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ನೈತಿಕ ಸ್ಥೈರ್ಯ ತುಂಬಿದರು.
ಪರಿಸರ ಸ್ನೇಹಿ ಸಾಮಗ್ರಿ ಬಳಕೆ :
ಈ ಬಾರಿಯ ಚುನಾವಣೆಯಲ್ಲಿ ಮತಗಟ್ಟೆಗೆ ಸಾಗಿಸಬೇಕಾದ ಸಾಮಗ್ರಿಗಳನ್ನು ನೀಡಲು ಯಾವುದೇ ಪ್ಲಾಸ್ಟಿಕ್ ಬ್ಯಾಗ್‍ಗಳನ್ನು ಬಳಸದೆ, ಬಟ್ಟೆಯ ಬ್ಯಾಗ್, ಪೇಪರ್ ಕವರ್‍ಗಳನ್ನು ಮಾತ್ರ ಬಳಸುವ ಮೂಲಕ ಮತಗಟ್ಟೆಯನ್ನು ಪರಿಸರ ಸ್ನೇಹಿಯನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ.
ವಿ.ವಿ. ಪ್ಯಾಟ್ ಯಂತ್ರ ಹಾಗೂ ವಿದ್ಯುನ್ಮಾನ ಮತಯಂತ್ರಗಳಿಗೆ ಆದಷ್ಟು ಬಿಸಿಯ ತಾಪದಿಂದ ರಕ್ಷಿಸುವ ರೀತಿ ಕ್ರಮ ಕೈಗೊಳ್ಳುವಂತೆ ಮತಗಟ್ಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಆದರೆ ಮತದಾನ ಗೌಪ್ಯತೆ ಕಾಪಾಡುವ ರೀತಿ ಕಿಟಕಿಗಳ ಮೂಲಕ ಮತದಾನ ಪ್ರಕ್ರಿಯೆ ಕಾಣದಂತೆ ವ್ಯವಸ್ಥೆಗೊಳಿಸಲು ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪ್ರಥಮ ಚಿಕಿತ್ಸಾ ಕಿಟ್ :
ಸದ್ಯ ಬಿರು ಬೇಸಿಗೆ ಇರುವುದರಿಂದ, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡಿರುವ ಸಿಬ್ಬಂದಿಗಳ ಆರೋಗ್ಯ ರಕ್ಷಣೆಯತ್ತಲೂ ಕಾಳಜಿ ವಹಿಸಲಾಗಿದ್ದು, ಈ ಬಾರಿ ಎಲ್ಲ ಮತಗಟ್ಟೆಗಳಿಗೂ ಪ್ರಥಮ ಚಿಕಿತ್ಸಾ ಕಿಟ್, ಬಿಸ್ಕೆಟ್ ಪಾಕೆಟ್, ಕುಡಿಯುವ ನೀರಿನ ವ್ಯವಸ್ಥೆ, ಜೀವ ರಕ್ಷಕ ಔಷಧಿಗಳು ಹಾಗೂ ಓಆರ್‍ಎಸ್ ಪಾಕೆಟ್‍ಗಳನ್ನು ಮುಂಜಾಗ್ರತಾ ಕ್ರಮವಾಗಿ ನೀಡಲಾಗಿದೆ.
ಅಲ್ಲದೆ ತುರ್ತು ಸಂದರ್ಭದಲ್ಲಿ ವೈದ್ಯರ ಲಭ್ಯತೆ ಇರುವಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಚಿತ್ರದುರ್ಗ ಸಹಾಯಕ ಚುನಾವಣಾಧಿಕಾರಿ ವಿಜಯಕುಮಾರ್ ಅವರು ಮಸ್ಟರಿಂಗ್ ಕಾರ್ಯದ ನೇತೃತ್ವ ವಹಿಸಿದ್ದರೆ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣೆ ಸಿಬ್ಬಂದಿಗಳ ನಿಯೋಜನೆಯ ಮೇಲುಸ್ತುವಾರಿಯನ್ನು ವಹಿಸಿದ್ದರು.