ಬೆಂಗಳೂರು
ರಾಜ್ಯದ ವಸತಿ ನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಡಿ ಗ್ರೂಪ್ ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಹೊರಗುತ್ತಿಗೆ ನೌಕರರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂಭಾಗ ರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕ ಸಂಘ ನೇತೃತ್ವದಲ್ಲಿ ಸೇರಿದ ಹೊರಗುತ್ತಿಗೆ ನೌಕರರು ವಸತಿ ನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಡಿ ಗ್ರೂಪ್ ಹೊರಗುತ್ತಿಗೆ ನೌಕರರನ್ನು ವಜಾಗೊಳಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಾಗ ಪೊಲೀಸರು ಮಾರ್ಗ ಮಧ್ಯೆಯೇ ತಡೆದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಸೋಮಶೇಖರ್, ಏಕಾಏಕಿ 3 ಸಾವಿರಕ್ಕೂ ಅಧಿಕ ಡಿ ಗ್ರೂಪ್ ನೌಕರರನ್ನು ವಜಾಗೊಳಿಸಿರುವ ಸರ್ಕಾರದ ಕ್ರಮ ಸರಿಯಲ್ಲ ಕೂಡಲೇ ಆದೇಶವನ್ನು ಹಿಂದೆಪಡೆಯಬೇಕು ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಬಾಲಕಿಯರ ವಸತಿ ನಿಲಯಗಳಲ್ಲಿ ಸರ್ಕಾರದಿಂದ ಮಂಜೂರಾಗಿರುವ ಅಡುಗೆಯವರು, ಅಡುಗೆ ಸಹಾಯಕರು, ಕಾವಲುಗಾರರು, ಹುದ್ದೆಗಳಲ್ಲಿ ಸಾವಿರಾರು ನೌಕರರು ಸೇವೆ ಸಲ್ಲಿಸುತ್ತಿದ್ದಾರೆ.
ಆದರೆ, ಇದೇ ಉದ್ಯೋಗವನ್ನು ಅವಲಂಬಿಸಿರುವ 3,312 ಹೊರಗುತ್ತಿಗೆ ಕೆಲಸದಿಂದ ವಜಾಗೊಳಿಸಲಾಗಿದೆ. ಇನ್ನೂ ಈ ಸಂಬಂಧ ಮುಖ್ಯಮಂತ್ರಿ ಸೂಕ್ತ ಪರಿಹಾರ ಒದಗಿಸುತ್ತಾರೆ ಎನ್ನುವ ವಿಶ್ವಾಸ ಇದ್ದು, ಪ್ರತಿಭಟನೆ ಮೂಲಕ ಎಚ್ಚರಗೊಳಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ