ಕುಣಿಗಲ್
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸರ್ಕಾರ ಅನೇಕ ಸವಲತ್ತುಗಳು ನೀಡುತ್ತಾ, ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ದಾಖಲು ಮಾಡುವುದು ಅವಶ್ಯಕವಾಗಿರುತ್ತದೆ ಎಂದು ತುಮಕೂರು ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪನ್ಯಾಸಕಿ ಮಮತಾಮಣಿ ತಿಳಿಸಿದರು.
ಪಟ್ಟಣದ ಮಹಾತ್ಮಗಾಂಧಿ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ,ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡುತ್ತಾ, ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಲು ಉತ್ತೇಜಿಸಬೇಕು. ಸರ್ಕಾರ ಮಕ್ಕಳಿಗೆ ಅನೇಕ ವಿಧವಾದ ಸೌಲಭ್ಯಗಳನ್ನ ನೀಡುತ್ತಿದೆ.
ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ, ಶೂ ಭಾಗ್ಯ, ವಸ್ತ್ರ ಭಾಗ್ಯ,ವಿದ್ಯಾರ್ಥಿ ವೇತನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಸೇರಿದಂತೆ ಅನೇಕ ಸೌಲಭ್ಯಗಳನ್ನ ನೀಡುತ್ತಿದ್ದು, ಇವುಗಳನ್ನ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕಾಗಿದೆ. ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಶಿಕ್ಷಣ ಪಡೆಯುವುದು ಕಷ್ಟವಾಗಿತ್ತು. ಇಂದು ಸಮಾಜದಲ್ಲಿ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆದು ಪ್ರತಿಭಾವಂತ ವ್ಯಕ್ತಿಗಳಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದರು.
ಉದ್ಘಾಟಿಸಿದ ಪುರಸಭಾ ಸದಸ್ಯ ಶಂಕರ್ ಮಾತನಾಡಿ, ಮಹಾತ್ಮ ಗಾಂಧಿ ಹೆಸರಿನಲ್ಲಿ ಆರಂಭಗೊಂಡ ಕಾಲೇಜು ಬೆಳೆದು ಇತಿಹಾಸವಿದೆ. ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿದ್ದಾರೆ. ಶಾಸಕರು, ಸಂಸದರ ಗಮನ ಸೆಳೆದು ಈ ಕಾಲೇಜನ್ನ ಉನ್ನತೀಕರಿಸಲು ಶ್ರಮಿಸುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನ, ನಿವೃತ್ತಿ ಹಾಗೂ ವರ್ಗಾವಣೆಗೊಂಡ ಶಿಕ್ಷಕರನ್ನ ಸನ್ಮಾನಿಸಲಾಯಿತು.ಉಪಪ್ರಾಂಶುಪಾಲರಾದ ಜಗದೀಶ್, ಪತ್ರಕರ್ತ ರಾಮಚಂದ್ರಯ್ಯ, ಮುಖ್ಯ ಶಿಕ್ಷಕರಾದ ನೇತ್ರಾವತಿ, ಸೋಮಶೇಖರಯ್ಯ, ಸಿದ್ಧಗಂಗಯ್ಯ , ಶಿವಕುಮಾರ್, ರಾಮಕಲ್ಲಪ್ಪ, ಪುಷ್ಪಾ, ಶಿಕ್ಷಕರಾದ ಸೀತಾಲಕ್ಷ್ಮೀ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ