ತುರುವೇಕೆರೆ
ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿ ಶುಕ್ರವಾರ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಬೆದರಿಕೆ ಹಾಕಿದ ಕಾರಣ ವ್ಯಕ್ತಿಯೋರ್ವನನ್ನು ಪಟ್ಟಣದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಬಂಧಿತ ಆರೋಪಿ ತಾಲ್ಲೂಕಿನ ಕಸಬಾದ ಲೋಕಮ್ಮನಹಳ್ಳಿ ಗ್ರಾಮದ ಪರಮೇಶ್ವರಯ್ಯ ಅವರ ಮಗ ಮಲ್ಲಿಕಾರ್ಜುನ್(40) ಎನ್ನಲಾಗಿದೆ.
ಶುಕ್ರವಾರ ಬೆಳಗ್ಗೆ ದಬ್ಬೇಘಟ್ಟ ರಸ್ತೆಯಲ್ಲಿ ಗೃಹರಕ್ಷಕ ಮಹಿಳಾ ಸಿಬ್ಬಂದಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಜನರು ಅನಾವಶ್ಯಕವಾಗಿ ಯಾರೂ ಓಡಾಡಬಾರದೆಂದು ಜಾಗೃತಿ ಮೂಡಿಸುತ್ತಿದ್ದರು. ಆ ಸಂದರ್ಭದಲ್ಲಿ ಇದೇ ಮಾರ್ಗವಾಗಿ ಮಲ್ಲಿಕಾರ್ಜುನ್ ಅವರು ಕಾರಿನಲ್ಲಿ ಬಂದದ್ದನ್ನು ಕಂಡ ಕರ್ತವ್ಯ ನಿರತ ಸಿಬ್ಬಂದಿ ಆತನನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಕೋಪಗೊಂಡ ಆತ ಕರ್ತವ್ಯನಿರತ ಸಿಬ್ಬಂದಿಯನ್ನು ಅವಾಚ್ಯ ಶಬ್ಬಗಳಿಂದ ನಿಂದಿಸಿ, ಬೆದರಿಸಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ353, 188 ಮತ್ತು 504 ರೀತ್ಯ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
