ಬಿಜೆಪಿ ಕಾರ್ಯಕರ್ತರ ಪೂರ್ವಭಾವಿ ಸಭೆ

ಹೊನ್ನಾಳಿ:

      ಭಾರತದಲ್ಲಿ ಸ್ವಾತಂತ್ರ್ಯಾನಂತರದ 55 ವರ್ಷಗಳಲ್ಲಿ ಆಗದಷ್ಟು ಅಭಿವೃದ್ಧಿ ಕಾರ್ಯಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಕೇವಲ 55 ತಿಂಗಳಲ್ಲಿ ಮಾಡಿದ್ದಾರೆ. ಇದು ಎಲ್ಲ ಭಾರತೀಯರೂ ಹೆಮ್ಮೆಪಡಬೇಕಾದ ಸಂಗತಿ ಎಂದು ಸಂಸದ ಜಿ.ಎಂ. ಸಿದ್ಧೇಶ್ವರ್ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಹಿರೇಕಲ್ಮಠದ ಶ್ರೀ ಜಗದ್ಗುರು ಪಂಚಾಚಾರ್ಯ ಸಮುದಾಯ ಭವನದಲ್ಲಿ ಶುಕ್ರವಾರ ತಾಲೂಕು ಬಿಜೆಪಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ನರೇಂದ್ರ ಮೋದಿ ಇನ್ನು ಹದಿನೈದು ವರ್ಷಗಳ ಕಾಲ ಪ್ರಧಾನಮಂತ್ರಿಯಾಗಿ ಕೆಲಸ ಮಾಡಿದರೆ ಭಾರತ ವಿಶ್ವ ಭಾರತ ಆಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.ನಮ್ಮ ತಂದೆಯವರಂತೆ ನಾನು ಕೂಡ ಜಿಲ್ಲೆಯ 1,800ಕ್ಕೂ ಹೆಚ್ಚು ಹಳ್ಳಿಗಳಿಗೆ ನಿರಂತರ ಭೇಟಿ ನೀಡಿ, ಅಭಿವೃದ್ಧಿಪರ ಕೆಲಸ ಮಾಡುತ್ತಾ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಜಿಲ್ಲೆಯಲ್ಲಿ ಬೇರೆ ಪಕ್ಷದವರು ಯಾವ ಗ್ರಾಮಗಳಿಗೂ ಹೋಗದಿರುವುದು ಎಲ್ಲಾ ಜನರಿಗೂ ಗೊತ್ತಿರುವ ವಿಚಾರವಾಗಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ತಾವೂ ಸ್ಪರ್ಧಿಸುತ್ತಿದ್ದು, ಜನರು ಸೂಕ್ತ ತೀರ್ಮಾನ ಮಾಡಬೇಕು ಎಂದು ತಿಳಿಸಿದರು. ಇದು ತಮ್ಮ ಕೊನೆಯ ಚುನಾವಣೆಯಾಗಿದ್ದು, ಜನರು ತಮ್ಮನ್ನು ಆಶೀರ್ವದಿಸಬೇಕು ಎಂದರು.

       ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ನರೇಂದ್ರ ಮೋದಿ ಅವರು ಪ್ರಾಮಾಣಿಕವಾಗಿ ಜನಮೆಚ್ಚುವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂದು ನಾವು ಮೈಮರೆಯಬಾರದು ಎಂದು ಹೇಳಿದರು.ಮೇ 25ಕ್ಕೆ ಸರಕಾರ ಪತನ: ಮೇ 23ರಂದು ರಾಜ್ಯದ 22ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಬಳಿಕ ಮೇ 25ಕ್ಕೆ ರಾಜ್ಯದ ಸಮ್ಮಿಶ್ರ ಸರಕಾರ ಪತನಗೊಂಡು ಬಿಜೆಪಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

      ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ವಿಸ್ತಾರಕ್ ಉಮೇಶ್, ಜಿಪಂ ಉಪಾಧ್ಯಕ್ಷ ಸಿ. ಸುರೇಂದ್ರನಾಯ್ಕ್, ಸದಸ್ಯರಾದ ವೀರಶೇಖರಪ್ಪ, ಉಮಾ ರಮೇಶ್, ಎಂ.ಆರ್. ಮಹೇಶ್, ಮುಖಂಡರಾದ ಶಾಂತರಾಜ್ ಪಾಟೀಲ್, ನಾಗರಾಜ್, ರಘು, ಕುಂದೂರು ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು. ತಾಲೂಕಿನ ವಿವಿಧೆಡಗಳಿಂದ ಅಧಿಕ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link