ಚುನಾವಣೆ ಪ್ರಚಾರ ವೇಳೆ ಪ್ರತಿಬಂಧಕಾಜ್ಞೆ ಜಾರಿ

ಚಿತ್ರದುರ್ಗ.:

      ಪ್ರಸಕ್ತ ಲೋಕಸಭಾ ಚುನಾವಣೆ ನಿಮಿತ್ಯ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮಾರ್ಗಸೂಚಿ ಹಾಗೂ ನೀತಿಸಂಹಿತೆ ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಹಾಗೂ ಮತದಾನದ ಪಾವಿತ್ರ್ಯತೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಏಪ್ರಿಲ್ 23 ರವರೆಗೆ ಸಿ.ಆರ್.ಪಿ.ಸಿ. ಕಲಂ 1973 ರ ರೀತ್ಯ ಕಲಂ 144 ರ ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.

     ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಚುನಾವಣಾ ಪೂರ್ವದಲ್ಲಿ ಮತದಾರರನ್ನು ಯಾವುದೇ ಆಸೆ ಆಮಿಷಗಳಿಗೆ ಒಳಪಡಿಸಲು, ಬೆದರಿಸಲು ಯತ್ನಿಸುವ ಸಾಧ್ಯತೆಗಳಿರುತ್ತವೆ. ಅಲ್ಲದೆ ಮತಗಟ್ಟೆಗಳ ಹತ್ತಿರದಲ್ಲಿ ಪ್ರಚಾರ, ಸಾರ್ವಜನಿಕ ಸಭೆ ನಡೆಸುವುದು ಮುಂತಾದ ಅಹಿತಕರ ಘಟನೆಗಳನ್ನು ತಡೆಯಲು ಹಾಗೂ ಮತದಾನದ ಪಾವಿತ್ರ್ಯತೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ. ಕಲಂ 1973 ರ ರೀತ್ಯ ಕಲಂ 144 ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

      ಇದರನ್ವಯ ಮೆರವಣಿಗೆ ಅಥವಾ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವುಂಟು ಮಾಡುವ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಕಲ್ಲುಗಳನ್ನು ಕ್ಷಾರಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು, ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.

       ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ. ಬಹಿರಂಗ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನ ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳ ಮಾಡುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

         ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದುವುಗಳನ್ನು ಪ್ರದರ್ಶಿಸುವುದು ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯದಲ್ಲಿ ತೊಡಗುವುದನ್ನು ನಿಷೇಧಿಸಿದೆ.

         ಯಾವುದೇ ವ್ಯಕ್ತಿ, ಸಾರ್ವಜನಿಕರಾಗಲಿ ಮೇಲೆ ವಿವರಿಸಿದ ಮಾರಕಾಸ್ತ್ರ, ಸ್ಪೋಟಕ ವಸ್ತು, ವಿನಾಶಕಾರಿ ವಸ್ತುಗಳು, ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅವಕಾಶವಿದೆ. ಅಂತಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಾಗುವುದು, ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಮನೆಮನೆಗೆ ತೆರಳಿ ಪ್ರಚಾರ ಮಾಡುವ ವೇಳೆ 10 ಜನರಿಗಿಂತ ಹೆಚ್ಚು ಸಂಖ್ಯೆಯ ಜನರು ಸೇರತಕ್ಕದಲ್ಲ.

       ಈ ಆದೇಶವು ಅಂತ್ಯಕ್ರಿಯೆ ಮೆರವಣಿಗೆ ಮತ್ತು ಇತರ ಕಾರಣಗಳಿಗಾಗಿ ಅನುಮತಿ ಪಡೆದು ನಡೆಸುವ ಮೆರವಣಿಗೆಗೆ ಅನ್ವಯಿಸುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡಸಂಹಿತೆ ಕಲಂ 188 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link