ಮಧುಗಿರಿ
ದೇಶಕ್ಕೋಸ್ಕರ ಹಗಲಿರಳು ಹೋರಾಡಿ ರಾಷ್ಟ್ರವನ್ನು ರಕ್ಷಿಸುತ್ತಿರುವ ವೀರ ಯೋಧರನ್ನು ಸ್ಮರಿಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿದೇವಿ ತಿಳಿಸಿದರು.
ಪಟ್ಟಣದ ರಾಜೀವ್‍ಗಾಂಧಿ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ 74ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ದೇಶವು ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಕ್ರೀಡೆ, ಹಣಕಾಸು ಸೇರಿದಂತೆ ಇತರೆ ಕ್ಷೇತ್ರಗಳಲ್ಲಿಯೂ ಪ್ರಗತಿಯನ್ನು ಸಾಧಿಸಿದೆ. ಪ್ರಪಂಚದಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರವಾಗಿ ನಮ್ಮ ಭಾರತ ದೇಶ ಹೊರಹೊಮ್ಮಿದೆ. ದೇಶವು ಅನೇಕ ನೆರೆ ರಾಷ್ಟ್ರಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ ಎಂದರು.
ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಎಲ್ಲಾ ಕ್ಷೇತ್ರಗಳಲ್ಲಿ ಭಾರತ ದೇಶ ವೇಗವಾಗಿ ಅಭಿವೃದ್ದಿಯಾಗುತ್ತಿದ್ದು, ಪ್ರತಿಯೊಬ್ಬರೂ ದೇಶಕ್ಕೆ ಕೊಡುಗೆ ನೀಡ ಬೇಕಿದೆ. ನಂಜುಂಡಪ್ಪ ವರದಿ ಪ್ರಕಾರ ಮಧುಗಿರಿ ತಾಲ್ಲೂಕು ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಧುಗಿರಿ ಕ್ಷೇತ್ರಕ್ಕೆ ಕೈಗಾರಿಕಾ ಕೇಂದ್ರವನ್ನು ಮಂಜೂರು ಮಾಡಿದ್ದರು. ಆದರೆ ಸರ್ಕಾರ ಬದಲಾವಣೆಯಾದ ನಂತರ ಈ ಕಾರ್ಯ ಸ್ಥಗಿತಗೊಂಡಿದೆ. ಮಧುಗಿರಿಯನ್ನು ಕಂದಾಯ ಜಿಲ್ಲೆಯನ್ನಾಗಿ ಪರಿವರ್ತಿಸಲು ಸರ್ಕಾರಕ್ಕೆ ಈಗಾಗಲೆ ಮನವಿ ಮಾಡಲಾಗಿದ್ದು, ಜಿಲ್ಲೆಯನ್ನಾಗಿಸಲು ಎಲ್ಲಾ ಜನಪ್ರತಿನಿಧಿಗಳು ಕೈ ಜೋಡಿಸಬೇಕು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ ಮಧುಗಿರಿ ಶೈಕ್ಷಣಿಕ ಜಿಲ್ಲೆ 3 ನೆ ಸ್ಥಾನ ಗಳಿಸಿರುವುದು ಶ್ಲಾಘನೀಯ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
