ಸಿದ್ದಗಂಗೆ ಶ್ರೀಗಳಿಗೆ ಪ್ರಶಸ್ತಿ ನಿರಾಕರಣೆ : ಕೇಂದ್ರದ ವಿರುದ್ದ ಮಹಿಳಾ ಕಾಂಗ್ರೆಸ್ ಕಿಡಿ

ಚಿತ್ರದುರ್ಗ:

       ಪ್ರತಿನಿತ್ಯವೂ ಹತ್ತು ಸಾವಿರಕ್ಕೂ ಹೆಚ್ಚು ಬಡ ಮಕ್ಕಳಿಗೆ ಉಚಿತ ಅನ್ನ ಮತ್ತು ಅಕ್ಷರ ದಾಸೋಹ ನೀಡಿ ನಡೆದಾಡುವ ದೇವರು, ಶತಾಯುಷಿ, ತ್ರಿವಿದ ದಾಸೋಹಿ ಎಂದೆ ಲಕ್ಷಾಂತರ ಭಕ್ತರ ಮನದಲ್ಲಿ ಉಳಿದಿರುವ ತುಮಕೂರು ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಮಹಾಸ್ವಾಮಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡದೆ ಅಗೌರವ ಮಾಡಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‍ನಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

        ಮಾಜಿ ಮುಖ್ಯಮಂತ್ರಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರು ಸತತವಾಗಿ ನಾಲ್ಕು ವರ್ಷಗಳಿಂದಲೂ ಡಾ.ಶಿವಕುಮಾರ ಮಹಾಸ್ವಾಮಿಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸರ್ವ ಸಂಘ ಪರಿತ್ಯಾಗಿಯಾಗಿದ್ದ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದರೆ ಪ್ರಶಸ್ತಿಯ ಮೌಲ್ಯ ಹೆಚ್ಚುತ್ತಿತ್ತು. ಈಗಲಾದರೂ ಲಿಂಗೈಕ್ಯ ಡಾ.ಶಿವಕುಮಾರ ಮಹಾಸ್ವಾಮಿಗಳಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಲಿ ಎಂದು ಒತ್ತಾಯಿಸಿ ಮಹಿಳಾ ಕಾಂಗ್ರೆಸ್‍ನವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

        ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಿ.ಕೆ.ಮೀನಾಕ್ಷಿ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಮೋಕ್ಷರುದ್ರಸ್ವಾಮಿ, ರುದ್ರಾಣಿ ಗಂಗಾಧರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಭಾಗ್ಯಮ್ಮ, ಜಿಲ್ಲಾ ಕಾರ್ಯದರ್ಶಿ ಬಿ.ಜೆ.ಶೃತಿಅರಸ್, ಶಾಂತಮ್ಮ, ಟಿ.ಸುಮ, ಭಾರತಿ ಕಲ್ಲೇಶ್, ತಾರಮಂಜುಳ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ