ಚಿತ್ರದುರ್ಗ:
ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳ ಜೊತೆ ವಿಲೀನಗೊಳಿಸಲು ಹೊರಟಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಸರ್ಕಾರ ವಿವಿಧ ಕೆಲಸಗಳಿಗೆ ನಿಯೋಜನೆ ಮಾಡುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಆಗುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿಕೊಂಡು ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿರುವುದು ಸ್ಪಷ್ಟವಾಗಿದೆ. ಕರ್ನಾಟಕದಲ್ಲಿ ಕನ್ನಡದ ಮೇಲೆ ಬೇರೆ ಭಾಷೆಗಳನ್ನು ಹೇರಿ ದಬ್ಬಾಳಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾನಿರತರು ಎಚ್ಚರಿಸಿದರು.
ರಾಜ್ಯ ಸರ್ಕಾರ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಅಳಿಸಿ ಇಂಗ್ಲಿಷ್‍ಮಯ ಮಾಡಲು ಹೊರಟರೆ ಅತ್ತ ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸುವ ಸಂಚು ರೂಪಿಸುತ್ತಿದೆ. ಇದನ್ನು ಗಮನಸಿದರೆ ಗಂಡ-ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತಾಗಿದೆ ರಾಜ್ಯದಲ್ಲಿ ಕನ್ನಡದ ಸ್ಥಿತಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಆರ್.ಟಿ.ಇ.ಮೂಲಕ ಬಡ ಪ್ರತಿಭಾವಂತ ಮಕ್ಕಳು ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದರೆ ಶಿಕ್ಷಣದ ಶುಲ್ಕವನ್ನು ಭರಿಸುವಂತೆ ಆಡಳಿತ ಮಂಡಳಿ ಪೋಷಕರು ಹಾಗೂ ಮಕ್ಕಳ ಮೇಲೆ ಒತ್ತಡ ಹೇರುತ್ತಿದೆ. 14347 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ವಿಲೀನಗೊಳಿಸಲು ಸಿದ್ದಪಡಿಸಿರುವ ಪಟ್ಟಿಯನ್ನು ರಾಜ್ಯ ಸರ್ಕಾರ ಕೈಬಿಟ್ಟು ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ಆಟಿಕೆ ಸಾಮಾಗ್ರಿಗಳು, ಕಾಂಪೌಂಡ್ ನಿರ್ಮಿಸಿ ಗುಣಮಟ್ಟದ ಶಿಕ್ಷಕರುಗಳನ್ನು ನೇಮಿಸಿಕೊಳ್ಳಬೇಕು ಎಂದು ಜಯಕರ್ನಾಟಕ ಸಂಘಟನೆಯವರು ಒತ್ತಾಯಿಸಿದರು.
ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುತ್ತಿರುವ ಪೋಷಕರು ಹಾಗೂ ಮಕ್ಕಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದರಿಂದ ಡೊನೇಷನ್ ರೂಪದಲ್ಲಿ ಲಕ್ಷಾಂತರ ರೂ.ಗಳ ಸುಲಿಗೆ ಮಾಡುತ್ತಿರುವುದು ಮೊದಲು ನಿಲ್ಲಬೇಕು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಜಯಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ, ಕಾಯಾಧ್ಯಕ್ಷ ಶೇ.ಬೋ.ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ ಹೆಚ್.ರಾಮಚಂದ್ರಯ್ಯ, ಜಿಲ್ಲಾಧ್ಯಕ್ಷ ಎಂ.ಡಿ.ಅಶ್ವಕ್‍ಆಲಿ ಸೇರಿದಂತೆ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
