ಬೆಂಗಳೂರು
ಗೌರವ ಧನ ಏರಿಕೆ, ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಬುಧವಾರ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಮೌರ್ಯ ಸರ್ಕಲ್‍ನಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ಸೇರಿದ ನೂರಾರು ಆಶಾ ಕಾರ್ಯಕರ್ತೆಯರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಪ್ರೋತ್ಸಾಹ ಧನವನ್ನು ಒಟ್ಟಿಗೆ ಸೇರಿಸಿ ಕನಿಷ್ಠ ಮಾಸಿಕ ಗೌರವ ಧನ 12 ಸಾವಿರ ರೂ.ನಿಗದಿ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಆಶಾ ಸಾಫ್ಟ್ ಅಥವಾ ಆರ್‍ಸಿಹೆಚ್ ಪೋರ್ಟಲ್‍ಗೆ ಆಶಾ ಪ್ರೋತ್ಸಾಹ ಧನ ಜೋಡಣೆ ರದ್ದುಪಡಿಸಬೇಕು, ಕಳೆದ 9 ತಿಂಗಳಿಂದ ಬಾಕಿ ಇರುವ ಎನ್‍ಸಿಪಿಎಸ್ ಸೇವೆಗಳ ಪ್ರೋತ್ಸಾಹ ಧನವನ್ನು ಪ್ರತಿ ಆಶಾ ಕಾರ್ಯಕರ್ತೆಯರಿಗೆ 1 ಸಾವಿರ ರೂ., ಜನಸಂಖ್ಯೆ ಅನುಗುಣವಾಗಿ ಕಾರ್ಯನಿರ್ವಹಿಸುವ ಪ್ರತಿ ಆಶಾ ಕಾರ್ಯಕರ್ತೆಗೆ ಮಾಸಿಕ 3 ಸಾವಿರ ರೂ. ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿ ತಿಂಗಳ ವೇತನವನ್ನು ನಿಗದಿತ ದಿನಾಂಕದಂದು ಬಿಡುಗಡೆ ಮಾಡಬೇಕು. ವೇತನ ಬಿಡುಗಡೆಯಲ್ಲಿ ವಿಳಂಬವಾಗ ಬಾರದು, ಈ ಹಿಂದಿನ ಆರೋಗ್ಯ ಸಚಿವರು ನೀಡಿದ ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗ ಇರುವ ಆಶಾ ಕ್ಷೇಮಾಭಿವೃದ್ದಿ ನಿಧಿ ಸ್ಥಾಪಿಸಿಬೇಕು ಎಂದು ಆಗ್ರಹಿಸಿದರು.
ಆಶಾ ಕಾರ್ಯಕರ್ತೆಯ ಕಾಯಿಲೆಗಳ ಚಿಕಿತ್ಸೆಗೆ ಅಥವಾ ಮರಣ ಹೊಂದಿದರೆ ಅವರ ಕುಟುಂಬಕ್ಕೆ ಪರಿಹಾರ ಒದಗಿಸಲು ಕಾರ್ಪಾಸ್ ಫಂಡ್ ಮೀಸಲಿಟ್ಟು ಪರಿಹಾರ ನೀಡುವ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಘೋಘಣೆಗಳನ್ನು ಕೂಗಿದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಜಂಟಿಯಾಗಿ ಈ ಪ್ರತಿಭಟನೆಯನ್ನು ಆಯೋಜಿಸಿದ್ದವು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
