ಸಿದ್ದು ಭೇಟಿ ಮಾಡಿದ ರಾಮಲಿಂಗಾ ರೆಡ್ಡಿ

ಬೆಂಗಳೂರು

         ಸಚಿವ ಸ್ಥಾನ ಸಿಗದ ಕಾರಣಕ್ಕೆ ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಭೇಟಿ ತಮಗೆ ಸಂಪೂರ್ಣ ಸಮಾಧಾನ ತಂದಿದೆ. ಮುಂಬರುವ ಲೋಕಸಭಾ ಚುನಾವಣೆಯ ಬಳಿಕ ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯ ಮೇಲೆ ಕಾಂಗ್ರೆಸ್ ಪ್ರಧಾನಿ ರಾಷ್ಟ್ರದ ತ್ರಿವರ್ಣ ಧ್ವಜ ಹಾರಿಸಬೇಕು ಎಂಬುದು ತಮ್ಮ ಅಭಿಲಾಷೆಯಾಗಿದೆ ಎಂದು ಹೇಳಿದ್ದಾರೆ. 

         ಮುಂಬರುವ ಲೋಕಸಭಾ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಜತೆಗೆ ಕೇಂದ್ರದಲ್ಲೂ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದ್ದಾರೆ.

          ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಶಾಸಕಾಂಗ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಬರುವ ಲೋಕಸಭಾ ಚುನಾವಣೆ ಬಳಿಕ ತಮ್ಮನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಲಾಗುವುದು. ಚುನಾವಣೆ ನಮ್ಮ ಮುಂದಿನ ಪ್ರಮುಖ ಗುರಿಯಾಗಿದೆ. ಪಕ್ಷದ ಪರವಾಗಿ ಕೆಲಸ ಮಾಡಿ. ನಿಮ್ಮನ್ನು ನಿರ್ಲಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಮಲಿಂಗಾ ರೆಡ್ಡಿ ಅವರಿಗೆ ಸಿದ್ದರಾಮಯ್ಯ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.

        ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ತಮಗೆ ಸಂಪೂರ್ಣವಾಗಿ ಸಮಾಧಾನ ತಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ. ಪಕ್ಷ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬುದು ತಮ್ಮ ಗುರಿ ಎಂದರು

        ಮಂತ್ರಿ ಸ್ಥಾನ ಸಿಗದ ಕಾರಣದಿಂದ ಅಸಮಾಧಾನಗೊಂಡಿದ್ದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಅಭಿಪ್ರಾಯ ಭೇದಗಳು ಸಹಜ. ಕುಟುಂಬ ಎಂದ ಮೇಲೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರುತ್ತವೆ. ಇವುಗಳನ್ನು ಬಗೆಹರಿಸಿಕೊಂಡು ಮುನ್ನಡೆಯಬೇಕಾಗಿದೆ. ಆದರೆ ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಬೇಕು. ಬಿಜೆಪಿಗೆ ಪ್ರಬಲ ಪೈಪೋಟಿ ನೀಡಬೇಕು ಎಂಬುದು ತಮ್ಮ ಆಶಯವಾಗಿದೆ ಎಂದರು.

        ಸಚಿವ ಸ್ಥಾನಕ್ಕಾಗಿ ತಾವೆಂದೂ ಆಕಾಂಕ್ಷಿಯಾಗಿರಲಿಲ್ಲ. ತಮ್ಮ ಹೆಸರನ್ನು ಸಚಿವ ಸ್ಥಾನಕ್ಕೆ ಶಿಫಾರಸ್ಸು ಮಾಡುವಂತೆ ತಾವೆಂದೂ ಕೇಳಿಲ್ಲ. ತಮ್ಮ ರಾಜಕೀಯ ಬದುಕಿನ 42 ವರ್ಷಗಳಲ್ಲಿ ಯಾವುದೇ ಹಿರಿಯ ನಾಯಕರಿಗೆ ತಮ್ಮ ಪರವಾಗಿ ಪ್ರಭಾವ ಬೀರುವಂತೆ ಕೋರಿಲ್ಲ ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

        ತಮ್ಮ ಜತೆ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಮಾತನಾಡಿಲ್ಲ. ಬಿಜೆಪಿ ಶಾಸಕರಾದ ಕೃಷ್ಣಪ್ಪ, ಸತೀಶ ರೆಡ್ಡಿ ಅವರೂ ಸಹ ಖುದ್ದಾಗಿ ಭೇಟಿ ಮಾಡಿಲ್ಲ. ಯಲಹಂಕ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ತಮ್ಮ ಮಗನ ಮದುವೆ ಆಹ್ವಾನ ಪತ್ರಿಕೆ ನೀಡಲು ಮನಗೆ ಬಂದಿದ್ದರು ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

        ತಮಗೆ ಸಚಿವ ಸ್ಥಾನ ನಿರಾಕರಣೆ ಮಾಡಿರುವ ಕಾರಣದಿಂದ ಯಾವುದೇ ಬಿಬಿಎಂಪಿ ಸದಸ್ಯರು ರಾಜಿನಾಮೆ ನೀಡುವುದಿಲ್ಲ. ಬೆಂಗಳೂರಿನಲ್ಲಿ ತಾವೊಬ್ಬರೆ ಪ್ರಭಾವ ಹೊಂದಿಲ್ಲ. ಎಲ್ಲ ಶಾಸಕರನ್ನೂ ಕೂಡ ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap