ಬೆಂಗಳೂರು
ಆ್ಯಂಬಿಡೆಂಟ್ ವಂಚನೆ ಪ್ರಕರಣದ ಆರೋಪಿ ಬಿಜೆಪಿ ಮುಖಂಡ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಈ ಹಿಂದೆ ನೀಡಿದ್ದ ಆದೇಶವನ್ನು ರಾಜ್ಯ ಹೈಕೋರ್ಟ್ ವಿಸ್ತರಿಸಿದೆ.
ಸಿಸಿಬಿ ಪೊಲೀಸರು ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ನ್ಯಾಯಾಲಯದ ನೋಟಿಸ್ ತಲುಪದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಲು ಹೆಚ್ಚಿನ ಕಾಲಾವಕಾಶ ನೀಡುವಂತೆ ದೂರುದಾರರ ಪರ ವಕೀಲರ ಮನವಿಗೆ ಸ್ಪಂದಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಜೊತೆಗೆ, ಮುಂದಿನ ವಿಚಾರಣೆಯವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸಿಸಿಬಿ ಪೊಲೀಸರಿಗೆ ಸೂಚನೆ ನೀಡಿತು.
ಆ್ಯಂಬಿಡೆಂಟ್ ವಂಚನೆ ಪ್ರಕರಣ ಹಾಗೂ ಜನಾರ್ದನ ರೆಡ್ಡಿ ಹಾಗೂ ಅಲಿಖಾನ್‍ಗೆ ನೇರ ಸಂಬಂಧವಿಲ್ಲ ಎಂಬ ಅಂಶವನ್ನು ರಿಮ್ಯಾಂಡ್ ಅರ್ಜಿಯಲ್ಲೇ ಉಲ್ಲೇಖಿಸಲಾಗಿದೆ. ಆದ್ದರಿಂದ ಹೂಡಿಕೆದಾರರ ರಕ್ಷಣಾ ಕಾಯ್ದೆ ಅರ್ಜಿದಾರರಿಗೆ ಅನ್ವಯವಾಗುವುದಿಲ್ಲ. ಈ ಪ್ರಕರಣದಲ್ಲಿ ಅರ್ಜಿದಾರರನ್ನು ಅನವಶ್ಯಕವಾಗಿ ಸಿಲುಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ರೆಡ್ಡಿ ಪರ ವಕೀಲರು ವಾದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
