ತುಮಕೂರು:
ಜಿಲ್ಲೆಯ ಒಟ್ಟು 52 ವಸತಿ ಶಾಲೆಗಳ ಪ್ರವೇಶಕ್ಕಾಗಿ 8,920 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 7,813 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯನ್ನು ಎದುರಿಸಿದ್ದು, ಪ್ರವೇಶ ಪರೀಕ್ಷೆಯಲ್ಲಿ ಉತೀರ್ಣರಾದವರಿಗೆ ಕೌನ್ಸಿಲಿಂಗ್ ಏರ್ಪಡಿಸಲಾಗಿದೆ ಎಂದು ಜಿ.ಪಂ ಸಿಇಒ ಶುಭಾ ಕಲ್ಯಾಣ್ ತಿಳಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ, ಏಕಲವ್ಯ, ಅಟಲ್‍ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕೌನ್ಸಿಲಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 52 ವಸತಿ ಶಾಲೆಗಳಲ್ಲಿ 2670 ಸೀಟುಗಳು ಖಾಲಿ ಇದ್ದು, ಮೇ.20ರವರೆಗೂ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯಲಿದೆ, ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಸಮಾಜ ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಧಿಕಾರಿಗಳು, ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿಗಳು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಲಿದ್ದಾರೆ.
ವಸತಿ ಶಾಲೆಗೆ ಪ್ರವೇಶ ಪಡೆಯುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಶಿಕ್ಷಣದ ಜೊತೆಗೆ ಎಲ್ಲ ಮೂಲಸೌಕರ್ಯ ಒಳಗೊಂಡ ಊಟ ಮತ್ತು ವಸತಿ ವ್ಯವಸ್ಥೆಯನ್ನು ಉಚಿತವಾಗಿ ನೀಡಲಾಗುವುದು, ವಸತಿ ಶಾಲೆ ಪ್ರವೇಶ ಬಯಸಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಕೌನ್ಸಿಲಿಂಗ್‍ನಲ್ಲಿ ಪಾಲ್ಗೊಂಡಿದ್ದು, ಉತ್ತಮ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಪರಿಶಿಷ್ಟ ವರ್ಗಗಳ ಕಲ್ಯಾಧಿಕಾರಿ ರಾಜ್‍ಕುಮಾರ್ ಮಾತನಾಡಿ ಮೂರು ಇಲಾಖೆಗಳ 52 ವಸತಿ ಶಾಲೆಗಳಲ್ಲಿ ಪ್ರತಿ ಶಾಲೆಗೆ 250 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಶಿಕ್ಷಣೇತರ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುತ್ತದೆ. 6 ನೇತರಗತಿಯಿಂದ 10ನೇ ತರಗತಿಯವರೆಗೆ ನುರಿತ ಶಿಕ್ಷಕರಿಂದ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧನೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಕೌನ್ಸಿಲಿಂಗ್‍ನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸಿಇಒ ಶುಭಾ ಕಲ್ಯಾಣ್ ಸಾಂಕೇತಿಕವಾಗಿ ದಾಖಲಾತಿ ಪತ್ರವನ್ನು ನೀಡಿದರು.
ಕೌನ್ಸಿಲಿಂಗ್‍ನಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಜಿ.ಪಿ.ದೇವರಾಜಯ್ಯ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸುಬ್ರಾನಾಯ್ಕ್, ಪ್ರಾಂಶುಪಾಲರಾದ ಜಿತೇಂದ್ರ, ಜನಾರ್ಧನ್ ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
