ಹೊನ್ನಾಳಿ:
ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಮಾಸಡಿ-ಕುಂದೂರು ಜಿಲ್ಲಾ ಮುಖ್ಯ ರಸ್ತೆಯನ್ನು ವಿಸ್ತೀರ್ಣಗೊಳಿಸಿ ಅಭಿವೃದ್ಧಿಪಡಿಸಲು 17 ಕೋಟಿ ರೂ.ಗಳ ಅಂದಾಜು ವೆಚ್ಚದ ಯೋಜನೆ ತಯಾರಿಸಲಾಗಿದೆ. ಅನುದಾನ ಮಂಜೂರಾಗಿ ಟೆಂಡರ್ ಹಂತದಲ್ಲಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಕುಂದೂರು ಗ್ರಾಮದಲ್ಲಿ ಬುಧವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಗ್ರಾಮದ ಜುಮ್ಮಾ ಮಸೀದಿ ಆಂಜನೇಯ ದೇವಾಲಯ ಮುಂಭಾಗ ಮತ್ತು ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಕೈಗೊಂಡಿರುವ 93 ಲಕ್ಷ ರೂ.ಗಳ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.
ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಜನತೆಗೆ ಅಗತ್ಯ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ಗ್ರಾಮೀಣ ರಸ್ತೆಗಳು, ಆರೋಗ್ಯ, ಶಿಕ್ಷಣ ಮತ್ತಿತರ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ರಾಜ್ಯದಲ್ಲಿಯೇ ನನ್ನ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸುವ ಸಂಕಲ್ಪ ಮಾಡಿದ್ದೇನೆ ಎಂದು ತಿಳಿಸಿದರು.
ಈ ಹಿಂದೆ ಕುಂದೂರು ಗ್ರಾಮವನ್ನು ಸುವರ್ಣ ಗ್ರಾಮೋದಯ ಯೋಜನೆಯಡಿ ಕೋಟ್ಯಂತರ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ, ಅಂದು ಗ್ರಾಮದ ಎಲ್ಲಾ ರಸ್ತೆಗಳನ್ನು ಡಾಂಬರೀಕರಣಗೊಳಿಸಿದ ಕಾರಣ ಮಳೆಗಾಲದಲ್ಲಿ ರಸ್ತೆಗಳು ಹಾಳಾಗಿದ್ದವು. ಪ್ರಸ್ತುತ ವಿವಿಧ ಯೋಜನೆಗಳ ಅಡಿಯಲ್ಲಿ 2.50 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರಾಮದ ಎಲ್ಲ ಮುಖ್ಯ ಬೀದಿಗಳನ್ನು ಕಾಂಕ್ರಿಟ್ ರಸ್ತೆಗಳಾಗಿ ಅಭಿವೃದ್ಧಿಪಡಿಸಲಾಗಿದೆ. ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಅಭಿವೃದ್ಧಿಪಡಿಸಲಾಗಿದ್ದು, ಇನ್ನುಳಿದ ಕಾಮಗಾರಿಗಳಿಗೆ ಹಂತ ಹಂತವಾಗಿ ಅನುದಾನ ನೀಡಲು ಪ್ರಯತ್ನಿಸಲಾಗುವುದು ಎಂದರು.
ಕುಂದೂರು ಜಿಪಂ ವ್ಯಾಪ್ತಿಯ ಕುಂದೂರು ಮತ್ತು ಸುತ್ತಮುತ್ತಲಿನ 14 ಗ್ರಾಮಗಳ ಜನತೆಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗಬಾರದು ಎಂಬ ಉದ್ದೇಶದಿಂದ 17 ಕೋಟಿ ರೂ.ಗಳ ವೆಚ್ಚದಲ್ಲಿ ತುಂಗಭದ್ರಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಸಾಕಾರಗೊಳಿಸಲಾಗಿದ್ದು, ಈ ಭಾಗದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಲಾಗಿತ್ತು ಎಂದು ತಿಳಿಸಿದರು.
ಸರಕಾರಿ ಪ್ರೌಢಶಾಲೆ ಆವರಣದಲ್ಲಿ 2 ಕೋಟಿ ರೂ.ಗಳ ವೆಚ್ಚದ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಪ್ರಗತಿ ಹಂತದಲ್ಲಿದೆ. ಕುಂದೂರು ಗ್ರಾಮವನ್ನು ಮಾದರಿ ಗ್ರಾಮವೆಂದು ಬೆಸ್ಕಾಂ ಆಯ್ಕೆ ಮಾಡಿದ್ದು, ಈ ಯೋಜನೆಗೆ 20 ಲಕ್ಷ ರೂ.ಗಳನ್ನು ಮಂಜೂರು ಮಾಡಿಸಲಾಗಿದೆ. ಇದರಲ್ಲಿ ಗ್ರಾಮದ ಎಲ್ಲಾ ಭಾಗಗಳಲ್ಲಿ ಹಾದು ಹೋಗಿರುವ ಹಳೇ ವಿದ್ಯುತ್ ಮಾರ್ಗ, ಕಂಬ ಮತ್ತು ಪರಿವರ್ತಕಗಳನ್ನು ಬದಲಾಯಿಸಿ ಆಧುನೀಕರಣಗೊಳಿಸಲಾಗುತ್ತಿದೆ.
ಮುಂಬರುವ ದಿನಗಳಲ್ಲಿ ಮಾದರಿ ಗ್ರಾಮವನ್ನಾಗಿ ಅಭಿವೃದ್ಧಿಗೊಳಿಸಲು ಸ್ಥಳೀಯ ಪ್ರತಿನಿಧಿಗಳು, ಗ್ರಾಮಸ್ಥರು ನಿಗಾವಹಿಸಬೇಕು ಎಂದು ಹೇಳಿದರು.ಜಿಪಂ ಸದಸ್ಯೆ ದೀಪಾ ಜಗದೀಶ್, ತಾಲೂಕು ಬಿಜೆಪಿ ಉಪಾಧ್ಯಕ್ಷ ಸಿದ್ಧನಗೌಡ, ಗ್ರಾಪಂ ಅಧ್ಯಕ್ಷರು, ಸದಸ್ಯರು, ಮಾಜಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಅನೇಕ ಯುವಕರು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.