ದಾವಣಗೆರೆ:
ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಿರುವ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥಾವತ್ ಅನುಷ್ಠಾನಗೊಳಿಸಬೇಕು ಹಾಗೂ ದಲಿತ, ಹಿಂದುಳಿದ, ಶೋಷಿತರ ಹಕ್ಕುಗಳ ರಕ್ಷಣೆ ಮಾಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯ ಪದಾಧಿಕಾರಿಗಳು, ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪ್ರತಿಭಟನಾ ಮೆರವಣಿಗೆ ಹೊರಟ ದ.ಸಂ.ಸ. ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನಕ್ಕೆ ತೆರಳಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದ.ಸಂ.ಸ. ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ, ಆರ್ಥಿಕ, ಸಮಾಜಿಕ, ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳು ಸೇರಿದಂತೆ ಎಲ್ಲಾ ರಂಗಗಳಲ್ಲೂ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಸಾಮಾಜಿಕನ್ಯಾಯ ಕಲ್ಪಿಸುವ ಉದ್ದೇಶದಿಂದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ಜನಸಂಖ್ಯೆಯ ಆಧಾರದ ಮೇಲೆ ಒಳ ಮೀಸಲಾತಿ ಕಲ್ಪಿಸಲು ಶಿಫಾರಸು ಮಾಡಿ, ಸರ್ಕಾರಕ್ಕೆ ವರದಿ ನೀಡಿದೆ. ಆದರೆ, ರಾಜ್ಯ ಸರ್ಕಾರ ಈ ಶಿಫಾರಸುಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ತಕ್ಷಣವೇ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಶಿಫಾರಸುಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಸಿಗುವಂತೆ ಕಾನೂನು ಜಾರಿಗೊಳಿಸಬೇಕು. ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತ ಬಡವರಿಗೆ ಸರ್ಕಾರದ ವಿವಿಧ ಯೋಜನೆ ಹಾಗೂ ಜಿಲ್ಲಾದ್ಯಂತ ಎಲ್ಲಾ ಹಳ್ಳಿಗಳ ದಲಿತರು ಮತ್ತು ಎಲ್ಲಾ ಜಾತಿಗಳ ಬಡವರಿಗೂ ನಿವೇಶನ ಹಂಚಿಕೆ ಮಾಡಬೇಕು. ಜಿಲ್ಲಾದ್ಯಂತ ಪರಿಶಿಷ್ಟ ಜಾತಿ-ಪಂಗಡಗಳ ಕಾಲನಿಗಳಲ್ಲಿ ಅಂಬೇಡ್ಕರ್ ಭವನ, ಬಾಬು ಜಗಜೀವನ ರಾಮ್ ಭವನ ನಿರ್ಮಿಸಬೇಕು. ದೊಡ್ಡ ಬಾತಿ, ಯರಗುಂಟೆ, ಚಿಕ್ಕನಹಳ್ಳಿ ಸೇರಿದಂತೆ ವಿವಿಧೆಡೆ ನಿವೇಶನ ರಹಿತ ದಲಿತರು ಹಾಗೂ ಬಡವರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಪರಿಶಿಷ್ಟರ ಕುಂದು-ಕೊರತೆಗಳ ಸಭೆಯನ್ನು ಕಡ್ಡಾಯವಾಗಿ ಕರೆಯಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಭ್ರಷ್ಟಾಚಾರ ತಡೆಯಬೇಕು. ಸರ್ಕಾರೇತರ ಸ್ವಯಂಸೇವಾ ಸಂಸ್ಥೆಯಾದ ಹೊನ್ನಾಳಿಯ ಸ್ಫೂರ್ತಿ ಸಂಸ್ಥೆಯಲ್ಲಿನ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವ ಭ್ರಷ್ಟಾಚಾರ ವಿರೋಧಿ ವೇದಿಕೆಯ ಗುರುಪಾದಯ್ಯ ಮಠದ್‍ರನ್ನು ಜಿಲ್ಲೆಯಿಂದಲೇ ಗಡೀಪಾರು ಮಾಡಬೇಕು. ಸ್ಪೂರ್ತಿ ಸಂಸ್ಥೆ ವಿರುದ್ಧವೂ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಅವರು ತಾಕೀತು ಮಾಡಿದರು.
ರಾಜ್ಯದ ಎಸ್‍ಸಿ, ಎಸ್‍ಟಿ, ಹಿಂದುಳಿದ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡಲು ಹಣ ಸಾಕಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಟ 3 ಸಾವಿರ ರೂ. ಹಣ ಮಂಜೂರು ಮಾಡಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಗ್ರಂಥಾಲಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ದಾವಣಗೆರೆಯ ಅಂಬೇಡ್ಕರ್ ವೃತ್ತದಲ್ಲಿ 13 ಅಡಿ ಎತ್ತರದ ಬಾಬಾ ಸಾಹೇಬರ ಕಂಚಿನ ಪುತ್ಥಳಿ ಸ್ಥಾಪಿಸಬೇಕು. ಕರ್ನಾಟಕದ ಅಂಬೇಡ್ಕರ್ .ಬಿ.ಕೃಷ್ಣಪ್ಪ ಜನ್ಮ ಸ್ಥಳವಾದ ಹರಿಹರದ ಪ್ರಮುಖ ವೃತ್ತಕ್ಕೆ ಕೃಷ್ಣಪ್ಪ ಹೆಸರನ್ನು ನಾಮಕರಣ ಮಾಡಿ, ಕಂಚಿನ ಪುತ್ಥಳಿ ಸ್ಥಾಪಿಸಬೇಕು. .ಬಿ.ಕೃಷ್ಣಪ್ಪ ಅಧ್ಯಯನ ಕೇಂದ್ರ ಸ್ಥಾಪನೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಂಘಟನೆ ಮುಖಂಡರಾದ ಬುಳಸಾಗರದ ಸಿದ್ದರಾಮಪ್ಪ, ಜಿಗಳಿ ಹಾಲೇಶ, ನಾಗರಾಜ, ಪರಮೇಶ, ಮಾಲತೇಶ, ಎಂ.ಗುರುಮೂರ್ತಿ, ವಿಜಯಮ್ಮ, ಸತ್ಯಪ್ಪ, ನಾಗರಾಜ, ಕೃಷ್ಣಪ್ಪ, ಗಿರೀಶ, ಚಂದ್ರಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.