ಚಿತ್ರದುರ್ಗ:
ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯಪಾನ ನಿಷೇಧಿಸುವಂತೆ ಮದ್ಯ ನಿಷೇಧ ಆಂದೋಲನ-ಕರ್ನಾಟಕ, ಸ್ವಾಭಿಮಾನಿ ವುಮನ್ಸ್ ವೆಲ್‍ಫೇರ್ ಅಸೋಸಿಯೇಷನ್, ಸ್ಪೂರ್ತಿ ವಿಕಲಚೇತನರ ಟ್ರಸ್ಟ್ ಚಿತ್ರದುರ್ಗ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಮಹಿಳೆಯರು ಜಿಲ್ಲೆಯ ಎಲ್ಲಾ ಹಳ್ಳಿಗಳಲ್ಲಿ ಕೊಳಗೇರಿ ಪ್ರದೇಶಗಳಲ್ಲಿ ಹಾಗೂ ಕೆಲವು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ದಿನನಿತ್ಯವೂ ಕೂಲಿ ಮಾಡಿ ದುಡಿಯುವ ಹಣವನ್ನು ಪುರುಷರು ಮದ್ಯಸೇವಿಸಿ ಬರುವುದರಿಂದ ಮನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಉಪವಾಸವಿರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹಳ್ಳಿಗಾಡಿನಲ್ಲಿ ಮದ್ಯದ ಹಾವಳಿಯಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಕೂಡಲೆ ಸಂಪೂರ್ಣವಾಗಿ ಮದ್ಯ ಮಾರಾಟ ಬಂದ್ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮದ್ಯ ನಿಷೇಧ ಆಂದೋಲನದ ಜಿಲ್ಲಾ ಸಂಚಾಲಕಿ ಬೀಬಿಜಾನ್ ಮಾತನಾಡಿ ಕರ್ನಾಟಕದಲ್ಲಿ ಮದ್ಯ ನಿಷೇಧಿಸುವಂತೆ ಮದ್ಯ ನಿಷೇಧ ಆಂದೋಲನ ಕರ್ನಾಟಕದ ವತಿಯಿಂದ ಚಿತ್ರದುರ್ಗದಿಂದ ಬೆಂಗಳೂರಿಗೆ ಸಹಸ್ರಾರು ಮಹಿಳೆಯರು ಪಾದಯಾತ್ರೆ ಹೊರಟು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಮನವಿ ಅರ್ಪಿಸಿದರು ಇದುವರೆವಿಗೂ ಯಾವ ಕ್ರಮ ಕೈಗೊಂಡಿಲ್ಲ. ರಾಜ್ಯ ಸಮ್ಮಿಶ್ರ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಮದ್ಯ ಮಾರಾಟ ನಿಷೇಧಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮದ್ಯ ನಿಷೇಧ ಆಂದೋಲನ ಕರ್ನಾಟಕದಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಇದೇ ತಿಂಗಳ ಹದಿನೆಂಟು ಹಾಗೂ 23 ರಂದು ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಕೇವಲ ಬೆರಳೆಣಿಕೆಯಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ಮಹಿಳೆಯರನ್ನು ಅವಮಾನಿಸಲಾಗಿದೆ. ರಾಜಕೀಯದಲ್ಲಿ ಶೇ.33 ರಷ್ಟು ಮೀಸಲಾತಿ ಎಂದು ನೆಪಮಾತ್ರಕ್ಕೆ ಘೋಷಣೆಯಾಗಿದೆ. ಎಲ್ಲಾ ರಂಗದಲ್ಲಿಯೂ ಪುರುಷರಿಗೆ ಸರಿಸಮಾನವಾಗಿ ದುಡಿಯುತ್ತಿರುವ ಮಹಿಳೆಗೆ ಅಧಿಕಾರ ನೀಡಬೇಕಾದರೆ ಎಲ್ಲಾ ಪಕ್ಷಗಳು ಹಿಂದೇಟು ಹಾಕುವ ಮೂಲಕ ಮಹಿಳೆಯನ್ನು ರಾಜಕೀಯವಾಗಿ ಬೆಳೆಯಲು ಬಿಡದೆ ಹತ್ತಿಕ್ಕುವ ಹುನ್ನಾರ ನಡೆಸುತ್ತಿವೆ. ರಾಜ್ಯ ಸರ್ಕಾರ ಇನ್ನಾದರೂ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನೋಟಾಕ್ಕೆ ಮತಚಲಾಯಿಸಲಾಗುವುದೆಂದು ಬೆದರಿಕೆ ಹಾಕಿದರು.
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಆಶಯದಂತೆ ರಾಜಕೀಯದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸಿಕ್ಕಾಗ ಸರ್ವರಿಗೂ ಸಮಪಾಲು ಸಮಬಾಳು ಎಂಬ ಪದಕ್ಕೆ ನಿಜವಾದ ಅರ್ಥ ಸಿಗುತ್ತದೆ. ಸಂಪೂರ್ಣವಾಗಿ ಮದ್ಯಪಾನ ನಿಷೇಧ ಮಾಡುವುದಾಗಿ ಪಕ್ಷದ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಳಿಸಬೇಕು. ಇಲ್ಲವಾದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರನ್ನು ನಿರ್ಲಕ್ಷಿಸುವ ಪಕ್ಷಗಳಿಗೆ ಸರಿಯಾದ ಪಾಠ ಕಲಿಸಲಾಗುವುದೆಂದು ಬೀಬಿಜಾನ್ ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡ ಈ.ಎನ್.ಲಕ್ಷ್ಮಿಕಾಂತ್, ಟಿ.ವಿ.ಜಯಶೀಲ, ನಸ್ರಿನ್, ಶಾಕೀರ, ಷಾಮೀದ, ಮಮತ, ಮಂಜಮ್ಮ, ಲಲಿತಮ್ಮ, ಸಾಮಾಜಿಕ ಹೋರಾಟಗಾರ ನರೇನಹಳ್ಳಿ ಅರುಣ್‍ಕುಮಾರ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.