ದಾವಣಗೆರೆ :
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿಷ್ಠೆಯಿಂದ ಕಾರ್ಯನಿರ್ವಹಿಸುವುದರ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕೆಂದು ನಿಸ್ತಂತು ವಿಭಾಗದ ನಿವೃತ್ತ ಪೊಲೀಸ್ ಉಪ ನಿರೀಕ್ಷಕ ಕೆ.ಮರಿಸ್ವಾಮಿ ಸಲಹೆ ನೀಡಿದರು.ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್ ವತಿಯಿಂದ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಮಾನಸಿಕ ಹಾಗೂ ಶಾರೀರಿಕ ಆರೋಗ್ಯವು ಸದೃಢವಾಗಿದ್ದಲ್ಲಿ ಸ್ವಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿಷ್ಠೆಯಿಂದ ಸೇವೆ ಸಲ್ಲಿಸುವುದರ ಜೊತೆಗೆ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಹಾಗೂ ಆರೋಗ್ಯಕ್ಕೆ ಸಂಬಂಧಿಸಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ, ಕಾರ್ಯಗತಗೊಳಿಸಲು ಮುಂದಾಗಬೇಕೆಂದು ಮನವಿ ಮಾಡಿದರು.
ಸ್ವಾಗತ ಕೋರಿ ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್.ಆರ್, ಸಾರ್ವಜನಿಕರ ಸಹಕಾರದಿಂದ ಪೊಲೀಸರು ತಮ್ಮ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಲು ಸಾಧ್ಯವಾಗಲಿದೆ. ಹೀಗಾಗಿ ಇಲಾಖೆಗೆ ನಾಗರೀಕರು ಸಹಕಾರ ನೀಡಬೇಕೆಂದು ಸಲಹೆ ನೀಡಿದರು.
ದೇಶಾದ್ಯಂತ ರಕ್ಷಣಾ ಪಡೆಯ ನಿವೃತ್ತ ಸೈನಿಕರ ಕ್ಷೇಮಾಭಿವೃದ್ಧಿಗೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದೇರೀತಿ ರಾಜ್ಯದಲ್ಲೂ ಪೊಲೀಸ್ ಇಲಾಖೆಯಿಂದ ನಿವೃತ್ತಿ ಹೊಂದಿರುವ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿಗೆ ಪೊಲೀಸ್ ಧ್ವಜ ದಿನಾಚರಣೆ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.
1965ರ ಏಪ್ರಿಲ್ 2ರಂದು ಪೊಲೀಸ್ ಕಾಯ್ದೆ ಅನುಷ್ಠಾನಗೊಂಡಿರುವ ದಿನವಾಗಿರುವ ಹಿನ್ನೆಲೆಯಲ್ಲಿ ಏ.2ರಂದೇ ಪ್ರತಿವರ್ಷ ಪೊಲೀಸ್ ಧ್ವಜ ದಿನಾಚರಣೆ ನಡೆಸಿಕೊಂಡು ಬರುತ್ತಿದ್ದು. ಈ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಪೊಲೀಸ್ ಧ್ವಜ ಮಾರಾಟ ಮಾಡಿ ಬಂದ ಹಣದಲ್ಲಿ ಶೇ.50ರಷ್ಟನ್ನು ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿ ನಿಧಿಗೆ, ಶೇ.25ರಷ್ಟನ್ನು ಘಟಕದ ಪೊಲೀಸ್ ಕಲ್ಯಾಣ ನಿಧಿಗೆ ಹಾಗೂ ಇನ್ನುಳಿದ ಶೇ.25ರಷ್ಟು ಹಣವನ್ನು ಕೇಂದ್ರ ಕ್ಷೇಮಾಭಿವೃದ್ಧಿ ನಿಧಿಗೆ ಜಮೆ ಮಾಡಲಾಗುವುದು. ಈ ಹಣದಲ್ಲಿ ನಿವೃತ್ತ ಪೊಲೀಸ್ ಸಿಬ್ಬಂದಿಗಳ ಆರೋಗ್ಯಕ್ಕೆ ವೈದ್ಯಕೀಯ ಧನ ಸಹಾಯ ನೀಡುವುದೇ ಧ್ವಜ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು.
ಪೂರ್ವ ವಲಯ ಐಜಿಪಿ ಸೌಮೇಂದು ಮುಖರ್ಜಿ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಎಸ್ಪಿ ಉದೇಶ ಟಿ.ಜೆ ವಂದಿಸಿದರು. ಸಿಬ್ಬಂದಿಗಳಾದ ದೇವರಾಜ ಸಂಗೇನಹಳ್ಳಿ, ನಿರ್ಮಲ ಕಾರ್ಯಕ್ರಮ ನಿರೂಪಿಸಿದರು.ಸಮಾದೇಶಕ ಎಸ್.ವಿ.ದಿಲೀಪ್‍ಕುಮಾರ್ ನೇತೃತ್ವದಲ್ಲಿ ಆರು ತಂಡಗಳು ಪಥ ಸಂಚನ ನಡೆಸಿದವು. ಕಳೆದ ಒಂದು ವರ್ಷದ ಅವಧಿಯಲ್ಲಿ ನಿವೃತ್ತರಾದ 21 ಜನರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ