ತುಮಕೂರು
ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಎಂಪ್ರೆಸ್ ಕಾಲೇಜಿನಲ್ಲಿಂದು ಏರ್ಪಡಿಸಲಾಗಿದ್ದ “ಶಾಲೆಗೆ ಮರಳಲು-ನನಗೊಂದು ಅವಕಾಶ” ಎಂಬ ಜಿಲ್ಲಾ ಮಟ್ಟದ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳು ಸಮೃದ್ಧ ಸಮಾಜದ ಭದ್ರ ಬುನಾದಿಯಾಗಿದ್ದು, ಪ್ರತಿಯೊಬ್ಬ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದೆನ್ನುವ ಉದ್ದೇಶದಿಂದ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಕಾರಣಗಳಿಂದ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಯಾವೊಂದು ಮಗುವೂ ಶಾಲೆಯಿಂದ ಹೊರಗುಳಿಯದಂತೆ ನಿಗಾವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ 245 ಮಕ್ಕಳನ್ನು ಗುರುತಿಸಲಾಗಿದ್ದು, ಅವರನ್ನು ಕೂಡಲೇ ಶಾಲೆಗೆ ದಾಖಲಿಸುವಂತೆ ಶಿಕ್ಷಕರು ಕಾರ್ಯತತ್ಪರರಾಗಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಶಿಕ್ಷಕರೊಂದಿಗೆ ಪೋಷಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಶಾಲೆ ಬಿಡುವ ಮಕ್ಕಳ ಬಗ್ಗೆ ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು. ಮಕ್ಕಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲವಾದ್ದರಿಂದ ಶಿಕ್ಷಕರು ಗ್ರಾಮೀಣ ಪ್ರದೇಶಗಳಲ್ಲಿ ಮನೆ-ಮನೆಗೆ ತೆರಳಿ ಮಕ್ಕಳನ್ನು ಶಾಲೆಗೆ ಕರೆ ತರಬೇಕು. “ಹೆಣ್ಣು ಮಕ್ಕಳು ಶಿಕ್ಷಣ ಕಲಿತರೆ ಶಾಲೆಯೊಂದು ತೆರೆದಂತೆ” ಎಂಬ ಮಾತಿನಂತೆ ಪ್ರತಿಯೊಂದು ಮಗುವೂ ಶಿಕ್ಷಣ ಪಡೆಯಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಆರ್. ಕಾಮಾಕ್ಷಿ ಮಾತನಾಡಿ ಮಕ್ಕಳು ಶಾಲೆ ಬಿಡುವ ಮುನ್ಸೂಚನೆ ಕಂಡು ಬಂದಲ್ಲಿ ತಕ್ಷಣವೇ ಪೋಷಕರೊಂದಿಗೆ ಸಮಾಲೋಚಿಸಿ, ಯಾವ ಕಾರಣದಿಂದಲೂ ಮಗು ಶಾಲೆ ತೊರೆಯದಂತೆ ಶಿಕ್ಷಕರು ನಿಗಾವಹಿಸಬೇಕು.
ಶಿಕ್ಷಣ ಹೊಂದುವುದು ಮಕ್ಕಳ ಮೂಲಭೂತ ಹಕ್ಕು. ಈ ನಿಟ್ಟಿನಲ್ಲಿ ಶಾಲೆ ಪ್ರಾರಂಭವಾದ ನಂತರ ವಿವಿಧ ಕಾರಣಗಳಿಂದ ಗೈರು ಹಾಜರಾಗುವ ಮಕ್ಕಳನ್ನು ಶಾಲೆಗೆ ಬರುವಂತೆ ಶಿಕ್ಷಕರು ಅವರ ಮನವೊಲಿಸುವ ಕೆಲಸ ಮಾಡಬೇಕು. ಮಕ್ಕಳಿಗಾಗಿ ರಾಜ್ಯ ಸರ್ಕಾರವು ಉಚಿತವಾಗಿ ಪಠ್ಯ ಪುಸ್ತಕ, ಸಮವಸ್ತ್ರ, ಶೂ, ಮಧ್ಯಾಹ್ನದ ಊಟ, ಕ್ಷೀರಭಾಗ್ಯ, ಬೈಸಿಕಲ್ ವಿತರಣೆ, ಮತ್ತಿತರ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಇವುಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾವಂತರಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ದಶರಥ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲತಾ ಕುಮಾರಿ, ಪ್ರಾಂಶುಪಾಲ ಸಿದ್ದಲಿಂಗಪ್ಪ, ಬಿಇಓ ರಂಗಧಾಮಪ್ಪ, ಬಿಆರ್‍ಸಿ ಗಂಗಹನುಮಯ್ಯ, ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.