ಬ್ಯಾಡಗಿ:
ಕೊರೋನಾ ವೈರಸ್ ಹಿನ್ನಲೆಯಲ್ಲಿ ಛತ್ತೀಸಗಢದ ಮಹಾಸಮುಂದ ನವೋದಯ ವಿದ್ಯಾಲಯದಲ್ಲಿರುವ ಜಿಲ್ಲೆಯ 23 ವಿದ್ಯಾರ್ಥಿಗಳನ್ನು ಸುರಕ್ಷತೆಯ ದೃಷ್ಟಿಯಿಂದ ಮರಳಿ ಜಿಲ್ಲೆಗೆ ಕರೆತರಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರೊಂದಿಗೆ ಕೂಡಿ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭರವಸೆ ವ್ಯಕ್ತಪಡಿಸಿದರು.
ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಅವರು ದೇಶದ ವಿವಿಧೆಡೆ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳು ಕೊರೋನಾ ವೈರಸ್’ನಿಂದಾಗಿ ಅತಂತ್ರ ಸ್ಥಿತಿಯಲ್ಲಿ ಪರದಾಡುವಂತಾಗಿದೆ. ಇನ್ನು ವಿದ್ಯಾರ್ಥಿಗಳ ಪಾಲಕರಂತೂ ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಆತಂಕದಲ್ಲಿದ್ದಾರೆ. ಅದರಲ್ಲೂ ಬಹಳಷ್ಟು ವಿದ್ಯಾರ್ಥಿಗಳು ತಮ್ಮ ಪಾಲಕರಿಗೆ ಮೊಬೈಲ್ ಫೋನ್ ಮೂಲಕ ಕರೆ ಮಾಡಿದ್ದರಲ್ಲದೆ ಆರೋಗ್ಯದ ಹಿತ ದೃಷ್ಟಿಯಿಂದ ಸ್ವಗ್ರಾಮಕ್ಕೆ ಮರಳಲು ಹಾತೊರೆಯುತ್ತಿರುವ ವಿಷಯ ತಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು.
ಜಿಲ್ಲೆಯ ಹಾನಗಲ್ ತಾಲೂಕಿನ ನವೋದಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪಾಲಕರೂ ಸಹ ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಆತಂಕ ಪಡುತ್ತಿದ್ದು, ತಮ್ಮನ್ನು ಭೇಟಿಯಾಗಿ ಮಕ್ಕಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ ಯಾರೂ ಈ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಕಟ್ಟು ನಿಟ್ಟಿನ ಕ್ರಮ ವಹಿಸಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯದ ದೃಷ್ಟಿಯಿಂದ ಅನಗತ್ಯವಾಗಿ ಹೊರಗಡೆ ತಿರುಗಾಡದೇ ಸ್ವಯಂ ಪ್ರೇರಿತರಾಗಿ ಕಡಿವಾಣ ಹಾಕಿಕೊಂಡು ಕೊರೋನಾ ವೈರಸ್ ತಡೆಗೆ ಮುಂದಾಗಬೇಕು ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ