ದಾವಣಗೆರೆ :
ನಗರದ ಲೋಕಿಕೆರೆ ರಸ್ತೆಯಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಉದ್ಯಾನವನಕ್ಕಾಗಿ ಮೀಸಲಿಟ್ಟಿರುವ ಜಾಗದಲ್ಲಿ ಕೆಲವರು ಕಾನೂನು ಬಾಹೀರವಾಗಿ ನಿವೇಶನಗಳನ್ನು ಅಭಿವೃದ್ಧಿ ಪಡಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ ಇಂಗಳೇಶ್ವರ ಆರೋಪಿಸಿದರು.
ನಗರದ ಜಿಲ್ಲಾಡಳಿತ ಭವಣದಲ್ಲಿ ಸೋಮವರ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಅವರು, ನಗರದ ಇಂಡಸ್ಟ್ರಿಯಲ್ ಏರಿಯಾದ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಹತ್ತಿರ ಉದ್ಯಾನವನಕ್ಕಾಗಿ ಮೀಸಲಿಟ್ಟಿರುವ ಜಾಗದಲ್ಲಿ ಕಾನೂನು ಬಾಹೀರವಾಗಿ ನಿವೇಶನಗಳನ್ನು ಅಭಿವೃದ್ಧಿ ಪಡಿಸಿ, ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಬೇಕು ಹಾಗೂ ಉದ್ಯಾನವನಕ್ಕೆ ಕಾಂಪೌಂಡ್ ನಿರ್ಮಾಣ ಮಾಡಿ ಗಿಡ ಮರಗಳನ್ನು ಬೆಳಿಸಿ, ಮಕ್ಕಳ ಆಟಿಕೆ ಸಾಮಾನುಗಳನ್ನು ಅಳವಡಿಸಿ ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ದೂಡಾ ಆಯುಕ್ತರು ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.ಚನ್ನಗಿರಿ ತಾಲ್ಲೂಕು ದೊಡ್ಡಘಟ್ಟ ನಿವಾಸಿ ಹನುಮಂತಪ್ಪ ಎಂಬುವರು ತಾವು ತಮ್ಮ ಗ್ರಾಮದಲ್ಲಿ ಸರ್ಕಾರಿ ಶಾಲೆಗೆಂದು ದಾನ ನೀಡಿರುವ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ಮನೆ ನಿರ್ಮಾಣ ಮಾಡುತ್ತಿದ್ದಾರೆ. ದಯವಿಟ್ಟು ಇದನ್ನು ನಿಲ್ಲಿಸಬೇಕೆಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಯಿಸಿದ ಜಿಲ್ಲಾಧಿಕಾರಿಗಳು, ಈ ಹಿಂದೆ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರಿ ಶಾಲೆಗಳಿಗೆ ಭೂದಾನ ನೀಡಲಾಗಿರುವ ಜಮೀನುಗಳಿಗೆ ಸಂಬಂಧಿಸಿದಂತೆ ಅದರ ದಾಖಲೆಗಳನ್ನು ಮತ್ತು ಖಾತೆ ಬದಲಾವಣೆಗಳನ್ನು ಮಾಡಿಕೊಳ್ಳುವಂತೆ ತಿಳಿಸಲಾಗಿತ್ತು. ದೂರಿನಲ್ಲಿ ತಿಳಿಸಿದ ಜಾಗಕ್ಕೆ ಸಂಬಂಧಿಸಿದಂತೆ ಖಾತೆ ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಿ, ಈ ಜಾಗದಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡ ನಿರ್ಮಾಣ ಕಾರ್ಯವನ್ನು ನಿಲ್ಲಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಡಿಡಿಪಿಐ ಪರಮೇಶ್ವರಪ್ಪನವರಿಗೆ ಸೂಚನೆ ನೀಡಿದರು.
ನಮ್ಮ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಅಧಿಕಾರಿಗಳು ಆಯ್ಕೆ ಮಾಡಿಕೊಂಡು, ಆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೆಲ್ಲಾ ಸೇರಿ ಮಕ್ಕಳಿಗೆ ಸ್ಪೂರ್ತಿ ನೀಡುವವಂತಹ ಮಾತುಗಳನ್ನು ಹೇಳುವ ಮೂಲಕ ಅವರಲ್ಲಿ ಕನಸು ಬಿತ್ತುವ ಕೆಲಸ ಮಾಡಬೇಕು. ಹಾಗೂ ವಿದ್ಯಾರ್ಥಿಗಳ ಗುರಿಗಳನ್ನು ತಿಳಿಯುವ ಪ್ರಯತ್ನ ಮಾಡಬೇಕು. ಈ ಸ್ಫೂರ್ತಿ ತುಂಬುವ ಪ್ರಯತ್ನವನ್ನು ಜ.29 ರಂದು ಜಗಳೂರು ತಾಲ್ಲೂಕಿನ ಹೊಸಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ “ಕನಸು ಬಿತ್ತುವ-ರಾಷ್ಟ್ರ ಕಟ್ಟುವ” ಕಾರ್ಯಕ್ರಮ ಮಾಡುವುದರ ಮೂಲಕ ಆರಂಭಿಸಲಾಗುವುದು ಎಂದು ತಿಳಿಸಿದರು.
ದಾವಣಗೆರೆ ನಿವಾಸಿ ಸೂರ್ಯಪ್ರಕಾಶ್ ಅರ್ಜಿ ನೀಡಿ, ಕರ್ನಾಟಕದ ಮಧ್ಯಭಾಗವಾಗಿರುವ ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಇಲ್ಲ. ನಗರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್‍ರವರ ಕಂಚಿನ ಪ್ರತಿಮೆ ಸ್ಥಾಪಿಸಬೇಕೆಂದು ಮನವಿ ಸಲ್ಲಿಸಿದರು.
ವಿನೋಬನಗರ ನಿವಾಸಿ ಸನ್ಮತಿಕುಮಾರ್, ತಮ್ಮ ತಂದೆಯವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದು, ತಮಗೆ ಸ್ವಂತ ಮನೆಯಿಲ್ಲ. ತಮ್ಮ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿದೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರದಿಂದ ಮಾನ್ಯತೆ ಇದೆ. ಹೀಗಾಗಿ ಮಹಾನಗರಪಾಲಿಕೆ ವತಿಯಿಂದ ತನಗೆ ನಿವೇಶನ ಕೊಡಿಸಬೇಕೆಂದು ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಸಕಾಲದಲ್ಲಿ ನಮ್ಮ ಜಿಲ್ಲೆಯು 6ನೇ ಸ್ಥಾನಕ್ಕಿಂತ ಕೆಳಗಿದ್ದು, ಸಕಾಲದಲ್ಲಿ ಹಾಕಿರುವ ಅರ್ಜಿಗಳನ್ನು ಎಲ್ಲಾ ಇಲಾಖೆಯವರು ಆದಷ್ಟು ಬೇಗ ವಿಲೇವಾರಿ ಮಾಡಸಬೇಕೆಂದು ಸೂಚನೆ ನೀಡಿದರು.ಜನಸ್ಪಂದನ ಸಭೆಗೆ ಹಲವಾರು ಇಲಾಖೆಗಳಿಗೆ ಸಂಬಂಧಿಸಿದಂತೆ ದೂರುಗಳು ಬರುತ್ತಿವೆ. ಆದರೆ, ಸಾರ್ವಜನಿಕರು ಮೊದಲು ತಮ್ಮ ಸಮಸ್ಯೆಯನ್ನು ಸಂಬಂಧಿಸಿದ ಇಲಾಖೆಗೆ ದೂರು ಅಥವಾ ಮನವಿ ಸಲ್ಲಿಸಬೇಕು. ಅದನ್ನು ಬಿಟ್ಟು ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೊತ್ತು ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಬರುವುದು ಸರಿ ಅಲ್ಲ.
ಮೊದಲು ತಮ್ಮ ಸಮಸ್ಯೆಗೆ ಸಂಬಂಧಿಸಿದ ಇಲಾಖೆಗೆ ಹೋಗಿ ಅಲ್ಲಿ ತಮ್ಮ ಕೆಲಸ ಆಗದೇ ಇದ್ದಾಗ ಮಾತ್ರ ಜಿಲ್ಲಾಧಿಕಾರಿಗಳ ಕಚೇರಿಗೆ ಬರಬೇಕು ಎಂದು ಸಲಹೆ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಘವೇಂದ್ರಸ್ವಾಮಿ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಲಕ್ಷ್ಮೀಕಾಂತ್ ಬೊಮ್ಮನ್ನಾರ್, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಸಂತೋಷಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ