ಚಿತ್ರದುರ್ಗ,
ಇದೇ ಜೂ. 21 ರಿಂದ 28 ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, 3381 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ವ್ಯವಸ್ಥೆ ಒದಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪ ಅವರು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಆಯೋಜಿಸುವ ಸಂಬಂಧ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಈಗಾಗಲೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ಇದೇ ಜೂ. 21 ರಿಂದ 28 ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬರುವ ಪರಿಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಕುಡಿಯುವ ನೀರು, ಆಸನದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ತಪ್ಪದೆ ಕಲ್ಪಿಸಬೇಕು ಎಂದು ತಿಳಿಸಿದರು
ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ವ್ಯವಸ್ಥೆ ಇರಬೇಕು, ಪರೀಕ್ಷಾ ದಿನಗಳಂದು ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಜವಾಬ್ದಾರಿ ಹೊತ್ತಿರುವ ಮಾರ್ಗಾಧಿಕಾರಿಗಳು, ಪ್ರಶ್ನೆಪತ್ರಿಕೆಗಳನ್ನು ಪೊಲೀಸ್ ಬಂದೋಬಸ್ತ್‍ನಲ್ಲಿ ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು.
ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಿದರು ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುವುದಲ್ಲದೆ, ಪರೀಕ್ಷಾ ಕೇಂದ್ರಗಳಲ್ಲಿನ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ವಿಚಕ್ಷಣಾ ದಳಗಳನ್ನು ನೇಮಿಸಲಾಗುವುದು. ಅಲ್ಲದೆ ಪರೀಕ್ಷಾ ಕೇಂದ್ರ ಸುತ್ತ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ, ಈ ಸೂಚನೆಗಳನ್ನು ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಪೂರಕ ಪರೀಕ್ಷೆಯನ್ನು ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೆ, ಯಶಸ್ವಿಯಾಗಿ ಪೂರ್ಣಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ವಿಜಯಕುಮಾರ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ 21855 ವಿದ್ಯಾರ್ಥಿಗಳ ಪೈಕಿ 18474 ವಿದ್ಯಾರ್ಥಿಗಳು ಪಾಸಾಗಿದ್ದು, ಅನುತ್ತೀರ್ಣರಾದವರ ಪೈಕಿ 3381 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. ಚಳ್ಳಕೆರೆ ತಾಲ್ಲೂಕಿನಲ್ಲಿ 611, ಚಿತ್ರದುರ್ಗ-888, ಹಿರಿಯೂರು-616, ಹೊಳಲ್ಕೆರೆ-381, ಹೊಸದುರ್ಗ-623, ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 262 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಲಿದ್ದಾರೆ. ಜುಲೈ 16 ರಿಂದಲೇ ಉತ್ತರಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ ಎಂದರು.
ಪರೀಕ್ಷಾ ಕೇಂದ್ರಗಳು :
ಚಳ್ಳಕೆರೆಯ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆ, ಹೆಚ್‍ಟಿಟಿಜಿಹೆಚ್‍ಎಸ್ ಶಾಲೆ. ಚಿತ್ರದುರ್ಗದ ಮಹಾರಾಣಿ ಬಾಲಕಿಯರ ಪ.ಪೂ. ಕಾಲೇಜು, ಬಾಲಕಿಯರ ಸರ್ಕಾರಿ ಪ.ಪೂ.ಕಾಲೇಜು, ಬಾಲಕರ ಸರ್ಕಾರಿ ಪ.ಪೂ. ಕಾಲೇಜು, ಡಾನ್ ಬಾಸ್ಕೋ ಪ್ರೌಢಶಾಲೆ. ಹೊಳಲ್ಕೆರೆಯ ಎಂ.ಎಂ. ಸರ್ಕಾರಿ ಪ.ಪೂ. ಕಾಲೇಜು, ಟಿ.ಪಿ.ಸಿ.ಕೆ. ಬಾಲಿಕಾ ಪ್ರೌಢಶಾಲೆ. ಹೊಸದುರ್ಗದ ಸರ್ಕಾರಿ ಪ.ಪೂ. ಕಾಲೇಜು, ಗವಿರಂಗನಾಥ ಸಂಯುಕ್ತ ಪ.ಪೂ. ಕಾಲೇಜು. ಹಿರಿಯೂರಿನ ಸರ್ಕಾರಿ ಪ.ಪೂ. ಕಾಲೇಜು, ಗಿರೀಶ ಬಾಲಕಿಯರ ಪ.ಪೂ. ಕಾಲೇಜು, ಮೊಳಕಾಲ್ಮೂರಿನ ಸರ್ಕಾರಿ ಪ.ಪೂ. ಕಾಲೇಜು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಜೆ. ಅಂಥೋನಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಸೇರಿದಂತೆ ಇತರೆ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.