ಬೆಂಗಳೂರು
ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವರುಣನ ಅಬ್ಬರ ಇನ್ನು ಕೆಲವು ದಿನಗಳ ಮುಂದುವರೆಯಲಿದೆ ಮತ್ತೆ ರಾಜ್ಯದಲ್ಲಿ ಪ್ರವಾಹ ಭೀತಿ ಎದುರಾಗಿದೆ.ಅಕ್ಟೋಬರ್ ತಿಂಗಳ ಆರಂಭದಿಂದಲೂ ರಾಜ್ಯದಲ್ಲಿ ಅಧಿಕ ಮಳೆಯಾಗುತ್ತಿದ್ದು ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾದರೆ,ಬೆಂಗಳೂರು ಸೇರಿ ದಕ್ಷಿಣ ಭಾಗದಲ್ಲಿ 77 ಮಿ.ಮೀ ಮಳೆಯಾಗಿದ್ದು ಇದು ವಾಡಿಕೆಗಿಂತ ಶೇ. 63ರಷ್ಟು ಹೆಚ್ಚಾಗಿದೆ.
ಬೆಳಗಾವಿ, ಧಾರವಾಡ ಸೇರಿದಂತೆ ಇತರ ಜಿಲ್ಲೆಗಳಲ್ಲಿ 61 ಮೀ ಮಳೆಯಾಗಿದ್ದು, ಈ ಭಾರಿ 39ರಷ್ಟು ಮಳೆ ಪ್ರಮಾಣ ಹೆಚ್ಚಾಗಿದೆ. ಮುಂದಿನ 2 ವಾರದಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇವಲ ಬೆಂಗಳೂರು ಮಾತ್ರವಲ್ಲ. ಈ ತಿಂಗಳ ಅಂತ್ಯದವರೆಗೂ ಅನೇಕ ಭಾಗಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಸುಳಿವು ನೀಡಿದೆ.
ಇದರಿಂದಾಗಿ ರಾಜ್ಯದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ತಲೆದೋರುವ ಭೀತಿ ಎದುರಾಗಿದೆ. ಈ ತಿಂಗಳ 23ರವರೆಗೆ ಸಿಲಿಕಾನ್ ಸಿಟಿಯಲ್ಲಿ ಮಳೆ ಬೀಳಲಿದ್ದು, ಶೇ. 80 ರಿಂದ 90ರಷ್ಟು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.ರಾಜ್ಯದ ಉತ್ತರ ಮತ್ತು ದಕ್ಷಿಣ ಜಿಲ್ಲೆಯಲ್ಲೂ ವರುಣನ ಆರ್ಭಟ ಮುಂದುವರೆಯಲಿದೆ. ಈ ತಿಂಗಳಾಂತ್ಯದವರೆಗೂ ಕರಾವಳಿ ಭಾಗ ಸೇರಿದಂತೆ ರಾಜ್ಯದ ಇತರೆಡೆ ಮಳೆಯಾಗಲಿದೆ. ವಾರಾಂತ್ಯದ ವೇಳೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ 24 ಗಂಟೆಗಳ ಅವಧಿಯಲ್ಲಿ 6 ಮಿ.ಮೀ ಮಳೆಯಾಗಿದ್ದರೆ, ಹಾಸನ ಜಿಲ್ಲೆಯಲ್ಲಿ 47.4 ಮೀ. ಮಳೆಯಾಗಿದೆ. ಇಂದು ಮತ್ತು ನಾಳೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳ ನಾಡಿನ ಮಾರ್ಗವಾಗಿ ಮುಂಗಾರು ಮಾರುತಗಳು ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು, ಇಂದು ಮತ್ತು ನಾಳೆ ಗುಡುಗು-ಸಿಡಿಲು ಸಹಿತ ಮಳೆಯಾಗಲಿದೆ. ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು ಹಾಗೂ ರಾಮನಗರ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ