ಬೆಂಗಳೂರು
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಮತ್ತು ಕಳಸಾ-ಬಂಡೂರಿ ಯೋಜನೆಗಳ ಕುರಿತು ತಮಿಳುನಾಡು ಹಾಗೂ ಗೋವಾ ಸರ್ಕಾರಗಳ ತಕರಾರು ಖಂಡಿಸಿ ಡಿ.27ರಂದು ಜಯ ಕರ್ನಾಟಕ ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ, ರಾಜ್ಯದ ಸಂಸದರು ಸಂಸತ್ ಭವನದ ಮುಂದೆ ಹಮ್ಮಿಕೊಂಡಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಬೆಂಗಳೂರಿನ ಪುರಭವನದ ಎದುರಿಗೆ ಬೆಳಿಗ್ಗೆ 11 ಗಂಟೆಗೆ ಧರಣಿ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.
ಮೇಕೆದಾಟು ಯೋಜನೆಯ ಡಿಪಿಆರ್ ತಯಾರಿಗೆ ಕೇಂದ್ರೀಯ ಜಲ ಆಯೋಗ ಅನುಮತಿ ನೀಡಿದ್ದರೂ, ತಮಿಳುನಾಡು ಸರ್ಕಾರ ವೈಯಕ್ತಿಕ ಹಾಗೂ ರಾಜಕೀಯ ದೃಷ್ಠಿಯಿಂದ ಯೋಜನೆಗೆ ಅಡ್ಡಿಪಡಿಸುತ್ತಿದೆ. ಇನ್ನೊಂದೆಡೆ, ಉತ್ತರ ಕರ್ನಾಟಕದ ಕಳಸ-ಬಂಡೂರಿ ಯೋಜನೆಗೆ ಗೋವಾ ಸರ್ಕಾರ ಅಡ್ಡಗಾಲು ಹಾಕುತ್ತಿರುವುದು ಖಂಡನೀಯ ಎಂದರು.
ಮೇಕೆದಾಟು ಯೋಜನೆಯ ನೀರನ್ನು ಕೇವಲ ಕುಡಿಯಲು ಬಳಸಿಕೊಳ್ಳುವುದಾಗಿ ಸರ್ಕಾರ ಸ್ಪಷ್ಟನೆ ನೀಡಿದ ನಂತರವೇ ಕೇಂದ್ರ ಜಲಸಂಪನ್ಮೂಲ ಇಲಾಖೆ ಯೋಜನೆಗೆ ಅನುಮತಿ ನೀಡಿದೆ. ಆದರೂ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಕುಡಿಯುವ ನೀರಿನ ವಿಚಾರದಲ್ಲಿ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಎರಡು ರಾಜ್ಯಗಳು ಹೀಗೆ ವರ್ತನೆ ಮುಂದುವರಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
