ಬೆಂಗಳೂರು
ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಲ್ಲಿನ ಅವ್ಯವಹಾರ ಹಿನ್ನೆಲೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಮಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಶಿಫಾರಸು ಮಾಡಿದೆ ಎಂದು ಅಧ್ಯಕ್ಷ ಅರಗ ಜ್ಞಾನೇಂದ್ರ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖಾ ವ್ಯಾಪ್ತಿಯಡಿ ಬರುವ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಲ್ಲಿನ ಲೋಪದ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ, ಸಮಿತಿ ಮುಂದೆ ದ್ವಂದ್ವ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಈ ಹಿನ್ನೆಲೆ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಸಮತಿ ಶಿಫಾರಸು ಮಾಡಿದೆ.
ಏನಿದು ಅವ್ಯವಹಾರ?:
ಕೇಂದ್ರ ಸರ್ಕಾರ ಅನುದಾನಿತ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ರಾಜ್ಯದಾದ್ಯಂತ 2010ರಿಂದ 2014ರ ವರೆಗೆ 2024 ಕಾಮಗಾರಿಗಳನ್ನು ಕೈಗೊಳ್ಳಲು ಮಂಜೂರಾತಿ ನೀಡಲಾಗಿತ್ತು.ಶಾಲಾ ಕೊಠಡಿ, ಪ್ರಯೋಗ ಶಾಲೆಗಳು, ಗ್ರಂಥಾಲಯ, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ಸೇರಿದಂತೆ ಹಲವು ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು.
ಯೋಜನೆಯ ಅನುಷ್ಠನಕ್ಕಾಗಿ 2024 ಕಾಮಗಾರಿಗಳಿಗೆ ಒಟ್ಟಾರೆ ಪರಿಷ್ಕೃತ ಗುತ್ತಿಗೆ ಮೊತ್ತ 1634.32 ಕೋಟಿ ರು. ಆಗಿತ್ತು. ಆದರೆ ಕಾಮಗಾರಿಗಳ ನಿರ್ಮಾಣಕ್ಕಾಗಿ ಏಕರೂಪ ಟೆಂಡರ್ ಕರೆಯದೆ ವಿವಿಧ ಪ್ಯಾಕೇಜುಗಳಾಗಿ ವಿಂಗಡಿಸಿ ಟೆಂಡರ್ ಕರೆಯಲಾಗಿದೆ. ಅವುಗಳನ್ನು ಹಲವು ಆಂಧ್ರ ಮೂಲದ ಗುತ್ತಿಗೆದಾರರಿಗೆ ಉಪಗುತ್ತಿಗೆ ನೀಡಲಾಗಿದೆ. ಗುತ್ತಿಗೆದಾರರಿಗೆ ಕಾಮಗಾರಿ ಹಣವನ್ನು ಪಾವತಿ ಮಾಡಿಲ್ಲ ಎಂದು ವಿವರಿಸಿದರು.
ರಾಜ್ಯ ಯೋಜನಾ ಇಂಜಿನಿಯರ್ ಟಿ.ಕೃಷ್ಣೇಗೌಡ ಹಾಗೂ ವಿಜಯ್ ಅವರು 76 ಪ್ಯಾಕೇಜುಗಳ ಏರಿಕೆ ಮೊತ್ತವನ್ನು ಸೇರ್ಪಡೆ ಮಾಡಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದರು.
ಶಿಕ್ಷಣ ಇಲಾಖೆಯಲ್ಲಿ ಇಂಜಿನಿಯರಿಂಗ್ ವಿಭಾಗ ಇಲ್ಲದಿದ್ದರೂ ಇಷ್ಟು ದೊಡ್ಡ ಮೊತ್ತದ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಬಹುತೇಕ ಕಾಮಗಾರಿಗಳು ಅಪೂರ್ಣವಾಗಿದೆ. ಇದರಿಂದ ಸರ್ಕಾರಕ್ಕೆ ಸುಮಾರು 700 ಕೋಟಿ ರೂ. ನಷ್ಟವಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಇಲಾಖಾ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಹಾಗೂ ರಾಜ್ಯ ಯೋಜನಾ ನಿರ್ದೇಶಕರಾದ ಎಂ.ಟಿ.ರೇಜು ಕರ್ತವ್ಯಲೋಪ ಎಸಗಿದ್ದಾರೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
