ಹಾವೇರಿ
ಹಾಸ್ಟೆಲ್, ಕಾಲೇಜು ಆವರಣದಲ್ಲಿ ಮಾದಕವಸ್ತು ದೊರೆತರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳನ್ನು ನೇರ ಹೊಣೆ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಬಿ ಅಧಿಕಾರಿಗಳು 200 ಕೆ.ಜಿ.ಯಷ್ಟು ಗಾಂಜಾ ವಶಪಡಿಸಿಕೊಂಡಿದ್ದು, ಜಾಲದ ಬಗ್ಗೆ ಕೆಲ ಸುಳಿವು ದೊರಕಿವೆ ಎಂದರು.
ಈ ಜಾಲದಲ್ಲಿ ವಿದೇಶಿಗರ ಪಾತ್ರ ಇರುವುದು ಖಾತರಿಯಾಗಿದೆ. ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಿ, ಮಾದಕ ಜಾಲವನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಇದರಲ್ಲಿ ಭಾಗಿಯಾದವರು ಯಾರೇ ಆಗಿರಲಿ, ಎಷ್ಟೇ ದೊಡ್ಡವರಾಗಿರಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.ಮುಂದೆ ಶಾಲಾ–ಕಾಲೇಜುಗಳು ಆರಂಭವಾದ ಬಳಿಕ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ