ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆದರೆ ಕಟ್ಟುನಿಟ್ಟಿನ ಕ್ರಮ ; ಆನಂದ್‍ಸಿಂಗ್

ಬಳ್ಳಾರಿ:

   ಸಿಎಂ ಯಡಿಯೂರಪ್ಪನವರು ಸಚಿವ ಸಂಪುಟ ವಿಸ್ತರಣೆ ಮಾಡುವ ಸಲುವಾಗಿ ದೆಹಲಿಗೆ ಹೋಗುತ್ತಿಲ್ಲ. ರಾಜ್ಯದಲ್ಲಿ ನೆರೆಹಾವಳಿಗೆ ಪರಿಹಾರ ಕೇಳುವ ಸಲುವಾಗಿ ದೆಹಲಿಗೆ ಹೋಗುತ್ತಿದ್ದಾರೆ ಎಂದು ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದ್‍ಸಿಂಗ್ ಸ್ಪಷ್ಟಪಡಿಸಿದರು.

   ನಗರದ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ಸಚಿವ ಸಂಪುಟ ವಿಸ್ತರಣೆಯಿಲ್ಲ. ಸಿಎಂ ಯಡಿಯೂರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಅನುಮತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ, ನೆರೆ ಹಾವಳಿಗೆ ಅನುದಾನ ಕೇಳುವ ಸಲುವಾಗಿ ಸಿಎಂ ಯಡಿಯೂರಪ್ಪನವರು ದೆಹಲಿಗೆ ತೆರಳಿ ಪ್ರಧಾನಿಗಳನ್ನು ಭೇಟಿಯಾಗಲಿದ್ದಾರೆ. ಅಷ್ಟೇ ಹೊರತು, ಇದರಲ್ಲಿ ಸಚಿವ ಸಂಪುಟ ವಿಸ್ತರಣೆ ಸೇರಿ ಯಾವುದೂ ಇಲ್ಲ ಎಂದರು.

   ಇದೇವೇಳೆ ನನಗೆ ಲಭಿಸಿರುವ ಅರಣ್ಯ ಖಾತೆ ನನಗೆ ತೃಪ್ತಿಯಿದೆ. ಖಾತೆ ಬದಲಾವಣೆ ಸಂಬಂಧ ಯಾವುದೇ ಗೊಂದಲ, ಪ್ರಸ್ತಾಪಗಳು ಇಲ್ಲ ಎಂದ ಸಚಿವ ಆನಂದ್‍ಸಿಂಗ್, ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಶಾಸಕ ಜಿ.ಸೋಮಶೇಖರರೆಡ್ಡಿಯವರು ನಮಗೆ ಆಶೀರ್ವಾದ ನೀಡಿದ್ದಾರೆ ಎಂದರು.

ಕಟ್ಟುನಿಟ್ಟಿನ ಕ್ರಮ;

   ಅರಣ್ಯ ಇಲಾಖೆ ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ ಎಂಬುದು ನನ್ನ ಗಮನಕ್ಕೂ ಬಂದಿದೆ. ಈ ಕುರಿತು ರಾಜ್ಯದಲ್ಲಿರುವ ಅರಣ್ಯ ಇಲಾಖೆಯ 13 ವೃತ್ತಗಳ ಎಲ್ಲ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ. ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಆದರೆ, ಈವರೆಗೂ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

  ಇನ್ನು ಸ್ಥಳೀಯ ಶಾಸಕರ ಸಲಹೆ ಮೇರೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಖರ್ಚು-ವೆಚ್ಚ, ಅಭಿವೃದ್ಧಿ ಬಗ್ಗೆ ಚರ್ಚಿಸಲು ಕ್ರಮಕೈಗೊಳ್ಳಲಾಗುವುದು. ಅಲ್ಲದೇ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿ, ಸದಸ್ಯರನ್ನು ನೇಮಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಶಾಸಕ ಜಿ.ಸೋಮಶೇಖರರೆಡ್ಡಿ ಸೇರಿ ಹಲವರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link