ಚಿತ್ರದುರ್ಗ
ಪ್ರಸಕ್ತ ವರ್ಷ ಜಿಲ್ಲೆಯ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ಮೇ. 25 ಮತ್ತು 26 ರಂದು ಎರಡು ದಿನಗಳ ಕಾಲ ಹಿರಿಯೂರಿನ ವಾಣಿ ವಿಲಾಸ ಸಾಗರದಲ್ಲಿ ಸಾಹಸಮಯ ಬೇಸಿಗೆ ಶಿಬಿರ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಹೇಳಿದರು.
ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ ಆಯೋಜಿಸುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ 8 ಮತ್ತು 9 ನೇ ತರಗತಿಯ ಒಟ್ಟು 100 ವಿದ್ಯಾರ್ಥಿಗಳಿಗೆ ಮೇ. 25 ಮತ್ತು 26 ರಂದು ಎರಡು ದಿನಗಳ ಕಾಲ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.
ಪಠ್ಯದ ಚಟುವಟಿಕೆಗಳ ಜೊತೆಗೆ, ವಿದ್ಯಾರ್ಥಿಗಳಿಗೆ ಸಾಹಸ ಪ್ರವೃತ್ತಿ, ಆತ್ಮಸ್ಥೈರ್ಯ ವೃದ್ಧಿಸುವುದು ಅಲ್ಲದೆ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ವಿಶಿಷ್ಟ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಬೇಸಿಗೆ ಶಿಬಿರಕ್ಕೆ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ವಹಿಸಬೇಕು.
ಪ್ರತಿ ತಾಲ್ಲೂಕಿನಿಂದ ಕನಿಷ್ಟ 16-17 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಬೇಕು. ವಿದ್ಯಾರ್ಥಿಗಳ ಆಯ್ಕೆಗೂ ಮುನ್ನ ಸಂಬಂಧಪಟ್ಟ ವಿದ್ಯಾರ್ಥಿಯ ಪಾಲಕರು/ಪೋಷಕರಿಂದ ಸಮ್ಮತಿ ಪತ್ರ ಪಡೆಯಬೇಕು. ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸುವುದರ ಜೊತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಸಭೆಯಲ್ಲಿ ಡಿಡಿಪಿಐ ಅಂಥೋನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ನರಸಿಂಹಪ್ಪ, ಸೇರಿದಂತೆ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.