ತುಮಕೂರು

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರು ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅಲ್ಲಿನ ಶಾಲಾ ಪರಿಸರವನ್ನು ಅರಿತುಕೊಳ್ಳುವ ಸಲುವಾಗಿ ಸೆಪ್ಟೆಂಬರ್ 19ರ ರಾತ್ರಿ ಪಾವಗಡ ತಾಲ್ಲೂಕು ಎನ್.ಅಚ್ಚಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಇದಕ್ಕೂ ಮುನ್ನ ಸಚಿವರು ಸಂಜೆ 6 ಗಂಟೆಗೆ ಗಡಿನಾಡ ಶಾಲೆಗಳ ಪ್ರಚಲಿತ ಸಮಸ್ಯೆಗಳು, ತಾಲ್ಲೂಕು ಮತ್ತು ಜಿಲ್ಲೆಯ ಶೈಕ್ಷಣಿಕ ವಿಚಾರಗಳ ಕುರಿತು ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ 6.30 ಗಂಟೆಗೆ ಸದರಿ ಶಾಲೆಯಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು, ಪೋಷಕರೊಂದಿಗೆ ಸಂವಾದ ನಡೆಸಿ ರಾತ್ರಿ 10 ಗಂಟೆಗೆ ವಿದ್ಯಾರ್ಥಿಗಳು ನಡೆಸಿಕೊಡುವ ಶೈಕ್ಷಣಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ರಾತ್ರಿ ಅದೇ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಮರುದಿನ ಸೆಪ್ಟೆಂಬರ್ 20ರ ಬೆಳಿಗ್ಗೆ 8 ಗಂಟೆಗೆ ಪಾವಗಡ ತಾಲ್ಲೂಕು ಮತ್ತು ಜಿಲ್ಲೆಯ ಅಧಿಕಾರಿಗಳೊಂದಿಗೆ ಗಡಿನಾಡು ಶಾಲೆಗಳ ಶೈಕ್ಷಣಿಕ ಪ್ರಗತಿ ಬಗ್ಗೆ ಚರ್ಚೆ ನಡೆಸಲಿದ್ದು, ಬೆಳಿಗ್ಗೆ 9 ಗಂಟೆಗೆ ವೆಂಕಟಮ್ಮನಹಳ್ಳಿ, ಕ್ಯಾತಗಾನಚರ್ಲು, ವಳ್ಳೂರು ಹಾಗೂ ತಿರುಮಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿ ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ 11.30 ಗಂಟೆಗೆ ಬೆಂಗಳೂರಿಗೆ ತೆರಳಿದ್ದಾರೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
