ತುಮಕೂರು
ಕೇಂದ್ರ ಚುನಾವಣಾ ಆಯೋಗ ಮತ್ತು ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶನಾಲಯದ ಸಂಯುಕ್ತಾಶ್ರಯದಲ್ಲಿ ಮತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಮಾರ್ಚ್ 29 ರಿಂದ ಮೂರು ದಿನಗಳ ಕಾಲ ಚುನಾವಣಾ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿದೆ.
ಈ ಪ್ರದರ್ಶನದಲ್ಲಿ ಏಪ್ರಿಲ್ 18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಬಗ್ಗೆ, ಮತದಾರರಲ್ಲಿ ಜಾಗೃತಿ ಮೂಡಿಸಲು ಚುನಾವಣೆ ಕುರಿತ ವಿವಿಧ ಸ್ಲೋಗನ್‍ಗಳನ್ನು ಬಳಸಿಕೊಂಡು ನಿರ್ಮಿಸಿರುವ ಪ್ರಚಾರ ಫಲಕಗಳು ಎಲ್ಲರ ಗಮನ ಸೆಳೆಯುತ್ತಿವೆ.
ಮೂರು ದಿನಗಳ ಕಾಲ ನಡೆಯುವ ಈ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ, ತುಮಕೂರು ಉಪವಿಭಾಗಧಿಕಾರಿ ಹಾಗೂ ತುಮಕೂರು ನಗರದ ಸಹಾಯಕ ಚುನಾವಣಾಧಿಕಾರಿ ಶಿವಕುಮಾರ್ ಅವರು, ಜಿಲ್ಲೆಯಲ್ಲಿ ಶೇ.100ರಷ್ಟು ಮತದಾನವಾಗಬೇಕು ಎಂಬ ಉದ್ದೇಶದಿಂದ ಮತದಾರರಲ್ಲಿ ಜಾಗೃತಿ ಮೂಡಿಸಲು ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿಯಾಗಿ ಜಾಗೃತಿ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದರು.
ಚುನಾವಣಾ ಆ್ಯಪ್, ಸಿವಿಜಿಲ್, ಸೇರಿದಂತೆ ಚುನಾವಣಾ ಮತದಾನದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಸಂದೇಶಗಳ ಪ್ರಚಾರ ಫಲಕಗಳನ್ನು ಈ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಲಾಗಿದೆ. ಜಿಲ್ಲೆಯ ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬರು ಮತಗಟ್ಟೆಗೆ ಆಗಮಿಸಿ ತಪ್ಪದೇ ಮತದಾನ ಮಾಡಬೇಕು ಎಂದು ಅವರು ಕರೆ ನೀಡಿದರು.
ಮಾರ್ಚ್ 29 ರಿಂದ 31ರವರೆಗೆ ಈ ವಸ್ತು ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು ಚುನಾವಣಾ ಮತದಾನದ ಬಗ್ಗೆ ಹೆಚ್ಚಿನ ಅರಿವನ್ನು ಪಡೆದು, ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಅವರು ತಿಳಿಸಿದರು. ತುಮಕೂರು ನಗರದ ಕೇಂದ್ರ ಭಾಗದಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಚುನಾವಣಾ ವಸ್ತು ಪ್ರದರ್ಶನವನ್ನು ಕುತೂಹಲದಿಂದ ವೀಕ್ಷಿಸಿ, ವಸ್ತು ಪ್ರದರ್ಶನ ಆಯೋಜಿಸಿರುವ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ., ಕೆಎಸ್ಸಾರ್ಟಿಸಿಯ ಜಿಲ್ಲಾ ಸಂಚಾರಿ ಅಧಿಕಾರಿ ಫಕ್ರುದ್ದೀನ್, ಮತ್ತಿತರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
