ಬೆಂಗಳೂರು :
ಲಾಕ್‍ಡೌನ್ ಸಡಿಲ ಮಾಡುವಾಗ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಆರ್ಥಿಕ ಚಟುವಟಿಕೆಗಳು ರಾಜ್ಯದಲ್ಲಿ ಗರಿಗೆದರಬೇಕಾದರೆ ಲಾಕ್‍ಡೌನ್ ಸಡಿಲಿಕೆ ಅನಿವಾರ್ಯ. ಆದರೆ ಈ ವಿಷಯದಲ್ಲಿ ಸರ್ಕಾರ ವಿವೇಚನೆಯಿಂದ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಕೃಷ್ಣರಾಜಪುರದಲ್ಲಿ ಇಂದು ದಿನಸಿ ಕಿಟ್‍ಗಳನ್ನು ವಿತರಿಸಿ ಸಿದ್ದರಾಮಯ್ಯ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಪುನಾರಂಭವಾಗಬೇಕಾಗುತ್ತದೆ. ಇಲ್ಲದಿದ್ದರೆ ಸರ್ಕಾರಿ ನೌಕರರಿಗೆ ವೇತನ ನೀಡಲೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ಲಾಕ್‍ಡೌನ್ ಸಡಿಲಿಕೆ ಅನಿವಾರ್ಯ. ಆದರೆ ಕಂಟೈನ್‍ಮೆಂಟ್ ವಲಯದಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಬಾರದು. ಕಿತ್ತಳೆ ಮತ್ತು ಹಸಿರು ವಲಯದಲ್ಲಿ ಸಡಿಲಿಕೆ ಮಾಡಿ ವಹಿವಾಟಿಗೆ ಅವಕಾಶ ಕೊಡಬೇಕು.
ಬಡವರು ಈಗ ಯಾವುದನ್ನೂ ಖರೀದಿ ಮಾಡುವ ಶಕ್ತಿ ಉಳಿಸಿಕೊಂಡಿಲ್ಲ. ಖರೀದಿ ಮಾಡುವ ಶಕ್ತಿ ಅವರಿಗೆ ಬರಬೇಕಾದರೆ ಸರ್ಕಾರ ಅವರಿಗಾಗಿ ಒಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಸಾಂಪ್ರದಾಯಿಕ ವೃತ್ತಿ ಮಾಡುವವರಿಗೆ ಈ ಪ್ಯಾಕೇಜ್ ಕೊಡಬೇಕು. ಆಗ ಮಾರುಕಟ್ಟೆಯಲ್ಲಿ ಖರೀದಿ ಪ್ರಕ್ರಿಯೆ ಉತಮವಾಗಿ ನಡೆಯಲು ಸಾಧ್ಯವಾಗುತ್ತದೆ. ಸರ್ಕಾರಕ್ಕೆ ತೆರಿಗೆ ಸಂದಾಯವಾಗುತ್ತದೆ. ಲಾಕ್‍ಡೌನ್ ಇನ್ನಷ್ಟು ಬಿಗಿಯಾದರೆ ನಿರುದ್ಯೋಗ ಸಮಸ್ಯೆ ಇನ್ನಷ್ಟು ಹೆಚ್ಚುವ ಅಪಾಯವೂ ಇದೆ. ಜೊತೆಗೆ ಜನ ಹಸಿವಿನಿಂದ ಬಳಲುವ ಸನ್ನಿವೇಶ ಸಹ ನಿರ್ಮಾಣವಾಗುತ್ತದೆ ಎಂದು ಹೇಳಿದರು.
ಚುನಾಯಿತ ಪ್ರತಿನಿಧಿಗಳು, ಸಂಘ, ಸಂಸ್ಥೆಗಳು ಹಸಿದವರಿಗೆ ಅನ್ನ ನೀಡುವ ಕೆಲಸ ಮಾಡದೇ ಹೋಗಿದ್ದರೆ ರಾಜ್ಯದಲ್ಲಿ ಹಾಹಾಕಾರ ಉಂಟಾಗುತ್ತಿತ್ತು. ಜನ ಬೀದಿಗಿಳಿದು ಹೋರಾಟ ಮಾಡುವಂತೆ ಆಗುತ್ತಿತ್ತು. ಹೀಗಾಗಿ ಸರ್ಕಾರ ಸೆ. 3ರ ಬಳಿಕ ವಿವೇಚನೆಯಿಂದ ಲಾಕ್‍ಡೌನ್ ಸಡಿಲಿಕೆ ಮಾಡಬೇಕು.
ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದರೂ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುತ್ತಿಲ್ಲ. ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳುತ್ತಿಲ್ಲ. ನಿಗಮ-ಮಂಡಳಿಗಳಲ್ಲಿ ಆಗುತ್ತಿರುವ ವೆಚ್ಚಕ್ಕೆ ಮೊದಲು ಕಡಿವಾಣ ಹಾಕಬೇಕು. ಅಲ್ಲಿಯ ಅಧಿಕಾರಿಗಳಿಗೆ ನೀಡುತ್ತಿರುವ ಸವಲತ್ತು ನಿಲ್ಲಿಸಬೇಕು. ತೀರಾ ಅಗತ್ಯ ಎನಿಸುವ ವಿಚಾರಗಳಿಗೆ ಮಾತ್ರ ಸರ್ಕಾರ ವೆಚ್ಚ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಚಿಂತನೆಯನ್ನೇ ಮಾಡುವುದಿಲ್ಲ. ಅಧಿಕಾರಿಗಳು ಬರೆದುಕೊಟ್ಟಿದ್ದನ್ನು ಮಾತ್ರ ಹೇಳುತ್ತಾರೆ ಎಂದು ಸಿದ್ದರಾಮಯ್ಯ ಅವರು ಟೀಕಿಸಿದರು.
ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಆರ್. ಪುರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ನಾರಾಯಣಸ್ವಾಮಿ ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ