ಚಿತ್ರದುರ್ಗ:
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 4 ರಿಂದ 23 ರವರೆಗೆ ನಡೆಯಲಿದ್ದು, ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಸೇರಿದಂತೆ ಇತರೆ ವಿದ್ಯುನ್ಮಾನ ಸಾಧನಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರನ್ನು (ಬೇಸಿಕ್ ಮೊಬೈಲ್ ಪೋನ್) ಹೊರತು ಪಡಿಸಿ, ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಮೊಬೈಲ್ ಫೋನ್ ತರುವುದನ್ನು ಹಾಗೂ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಕೈಗಡಿಯಾರ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಎಲ್ಲಾ ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಕಡ್ಡಾಯವಾಗಿ ಗೋಡೆ ಗಡಿಯಾರ ಅಳವಡಿಸಿಕೊಳ್ಳಬೇಕು. ಪರೀಕ್ಷೆ ಅವಧಿ ಮುಗಿಯುವವರೆಗೂ ಕೂಡ ಯಾವ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರದಿಂದ ಹೊರಗೆ ಬಿಡುವಂತಿಲ್ಲ. ಒಂದು ವೇಳೆ ಬಿಟ್ಟರೂ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಮೇಲ್ವಿಚಾರಕರು ಪಡೆಯಬೇಕು. ಪರೀಕ್ಷೆ ನಡೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ಫೋಟೋ ಗ್ರಾಫ್ ಮತ್ತು ವಿಡಿಯೋ ಗ್ರಾಫ್ ಮಾಡುವುದನ್ನು ನಿಷೇಧಿಸಲಾಗಿದೆ. ಹಾಗೂ ಮಾಧ್ಯಮ ಪ್ರತಿನಿಧಿಗಳು ಪರೀಕ್ಷಾ ಕೊಠಡಿಗಳನ್ನು ಪ್ರವೇಶಿಸಿ, ಫೋಟೋ, ವಿಡಿಯೋ ತೆಗೆಯುವಂತಿಲ್ಲ.
ಒಟ್ಟಾರೆಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಯಾವುದೇ ಆಡಚಣೆ ಹಾಗೂ ಲೋಪದೋಷಗಳಿಲ್ಲದೆ ಸುಗಮವಾಗಿ ನಡೆಯುವಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ವಿದ್ಯಾರ್ಥಿಗಳು ಕೈಗಡಿಯಾರ ಮತ್ತು ಮೊಬೈಲ್‍ಪೋನ್‍ಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚು ಪ್ರಚಾರ ಕೈಗೊಂಡು ಯಾವೊಬ್ಬ ವಿದ್ಯಾರ್ಥಿಯು ಮೊಬೈಲ್ ಹಾಗೂ ಕೈಗಡಿಯಾರವನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಸೂಚಿಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ನಾಗರಾಜಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, 16674 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವರು. ಇದರಲ್ಲಿ 8823 ಬಾಲಕಿಯರು ಹಾಗೂ 7851 ಬಾಲಕರು ಪರೀಕ್ಷೆ ಬರೆಯಲಿದ್ದು, ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಿಗೆ 137 ಕಾಲೇಜುಗಳು ಜೋಡಣೆಯಾಗಿವೆ ಎಂದು ಸಭೆಗೆ ಮಾಹಿತಿ ನೀಡಿದರು.
ಪರೀಕ್ಷೆಗಳು ಪ್ರಾರಂಭವಾಗುವ ಮೊದಲೇ ಪ್ರಶ್ನೆ ಪತ್ರಿಕೆ ಬಂಡಲ್‍ಗಳನ್ನು ಠೇವಣಿಸುವ ಹಾಗೂ ವಿತರಿಸುವ ಕಾರ್ಯಕ್ಕೆ ನಿಯೋಜಿಸುವ ಅಧಿಕಾರಿಗಳು ಆಧಾರ್ ಗುರುತಿನ ಚೀಟಿಯೊಂದಿಗೆ ಜಿಲ್ಲಾ ಖಜಾನೆಯಲ್ಲಿ ಬಯೋಮೆಟ್ರಿಕ್ ನೊಂದಣಿ ಮಾಡಿಸಿಕೊಳ್ಳಬೇಕು.ಜಿಲ್ಲಾ ಮಟ್ಟದ ಪ್ರಶ್ನೆ ಪತ್ರಿಕೆ ಪಾಲಕರ ಸಮಿಯ ಸದಸ್ಯರು ತಾಲ್ಲೂಕು ಮಟ್ಟದ ಪ್ರಶ್ನೆ ಪತ್ರಿಕೆ ಪಾಲಕರ ಸಮಿತಿಗೆ ಆಯಾ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 9.30 ರೊಳಗೆ ಪ್ರಶ್ನೆ ಪತ್ರಿಕೆ ತಲುಪುವಂತೆ ವ್ಯವಸ್ಥಿತವಾದ ಪ್ರಶ್ನೆ ಪತ್ರಿಕೆ ಬಂಡಲ್‍ಗಳನ್ನು ವಿತರಿಸುವುದು. ಪ್ರಶ್ನೆ ಪತ್ರಿಕೆ ರವಾನೆಗಾಗಿ ನಿಗಧಿಪಡಿಸಿದ ವಾಹನಕ್ಕೆ ಜಿಪಿಎಸ್ ಅಳವಡಿಕೆ ಬಗ್ಗೆ ಸಂಬಂಧಪಟ್ಟ ಮಾರ್ಗಾಧಿಕಾರಿಗಳು ಸಂಬಂಧಪಟ್ಟ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಬೇಕು ಎಂದರು.
ಪರೀಕ್ಷಾ ಕೇಂದ್ರಕ್ಕೆ ಇಲಾಖೆಯ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ, ಪರೀಕ್ಷಾ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು. ಪರೀಕ್ಷಾ ಕಾರ್ಯಗಳಿಗೆ ಅಡ್ಡಿ ಉಂಟು ಮಾಡಿದರೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗುವುದು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗುವುದು. ಪರೀಕ್ಷಾರ್ಥಿಗಳು ನಕಲು ಮಾಡುವುದು, ನಕಲು ಮಾಡಲು ಸಹಾಯ ಮಾಡುವುದು, ಬದಲಿ ವ್ಯಕ್ತಿಯಾಗಿ ಪರೀಕ್ಷೆ ಬರೆಯುವುದು, ಪ್ರಶ್ನೆ ಪತ್ರಿಕೆ ಸೋರಿಕೆಗೆ ಬಾಗಿಯಾಗುವವರ ವಿರುದ್ಧ ಕ್ರಮವಹಿಸಲಾಗುವುದು ಎಂದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ.ಪ್ರಸನ್ನ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರವಿಶಂಕರ್ ರೆಡ್ಡಿ ಸೇರಿದಂತೆ ತಹಶೀಲ್ದಾರ್‍ಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
