ಬೆಂಗಳೂರು:
ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಬೆಳಗಾವಿಯಲ್ಲಿಂದು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು, ಸಾಮಾಜಿಕ ಅಂತರ ಪಾಲನೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.
ಕೋವಿಡ್-19 ತಪಾಸಣೆಗೆ ಇರುವ ಅಡೆತಡೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ನೀಡಲಿರುವ ಹೊಸ ಮಾರ್ಗಸೂಚಿ ಆಧರಿಸಿ, ಇನ್ನಷ್ಟು ಚಟುವಟಿಕೆಗಳು ಆರಂಭಗೊಳ್ಳಲಿರುವುದರಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.
ಗೃಹಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸಭೆಯಲ್ಲಿ ಉಪಸ್ಥಿತರಿದ್ದರು.
ಇದಕ್ಕೆ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಯಲ್ಲಿಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಅಜಾತಶತ್ರು, ಸರಳ, ಸಜ್ಜನಿಕೆಯ ಪ್ರಾಮಾಣಿಕ ವ್ಯಕ್ತಿಯಾಗಿದ್ದ ಸುರೇಶ್ ಅಂಗಡಿ, ರೈಲ್ವೆ ಸಚಿವರಾಗಿ ಕೇವಲ ಒಂದೇ ವರ್ಷದ ಅವಧಿಯಲ್ಲಿ ರಾಜ್ಯಕ್ಕೆ ಆಗಬೇಕಾಗಿರುವ ಕೆಲಸ ಕಾರ್ಯಗಳಿಗಾಗಿ ಹಗಲಿರುಳು ಶ್ರಮಿಸಿದ್ದರು ಎಂದು ತಿಳಿಸಿದರು.ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ನಡೆದ ದೆಹಲಿಯ ರುದ್ರಭೂಮಿಯ ಅಭಿವೃದ್ಧಿಯ ಜತೆಗೆ ಅಲ್ಲಿ ಅವರ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಜಗದೀಶ್ ಶೆಟ್ಟರ್ ಮಾತನಾಡಿ, ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಸುರೇಶ್ ಅಂಗಡಿ ತೀವ್ರ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಸುರೇಶ್ ಅಂಗಡಿ ಅವರೊಂದಿಗಿನ ಒಡನಾಟ ಸ್ಮರಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
