ವಿದ್ಯಾರ್ಥಿಗಳು ನಪಾಸಾದರೆ ಶಿಕ್ಷಕರೇ ನೇರ ಹೊಣೆ : ಸಿಇಓ

ತುಮಕೂರು
     ಬರುವ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾದಲ್ಲಿ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಎಚ್ಚರಿಗೆ ನೀಡಿದರು. 
    ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,  ಎಲ್ಲಾ ತಾಲ್ಲೂಕಿನ ಸರ್ಕಾರಿ/ಅನುದಾನಿತ ಶಾಲೆಗಳ ಅರ್ಧವಾರ್ಷಿಕ ಪರೀಕ್ಷೆ ಫಲಿತಾಂಶದ ವಿವರಗಳನ್ನು ಪಡೆದರು. 
   ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಗಣಿತ, ಇಂಗ್ಲೀಷ್ ವಿಷಯದಲ್ಲಿ ಹಿಂದುಳಿದಿರುವುದು ಅರ್ಧ ವಾರ್ಷಿಕ ಪರೀಕ್ಷಾ ಫಲಿತಾಂಶದಿಂದ ತಿಳಿದುಬಂದಿದೆ. ಈ  ಅರ್ಧ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನಾಧರಿಸಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ವಿಶೇಷ ತರಗತಿಗಳನ್ನು ನಡೆಸುವ  ಮೂಲಕ ಮಕ್ಕಳು ಹೆಚ್ಚಿನ ಅಂಕಗಳನ್ನು ಪಡೆಯಲು ಪ್ರತಿಯೊಬ್ಬ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚಿಸಿದರು.
     ಸಾರ್ವಜನಿಕ ಶಿಕ್ಷಣ ಇಲಾಖೆಯ ತುಮಕೂರು/ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರುಗಳು ಸರ್ಕಾರಿ ಶಾಲಾ ಮಕ್ಕಳ ಪ್ರಗತಿಯತ್ತ ವಿಶೇಷ ಆಸಕ್ತಿ ವಹಿಸುವ ಮೂಲಕ ಜಿಲ್ಲೆಯ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶದಲ್ಲಿ ಉತ್ತಮ ಸುಧಾರಣೆಯನ್ನು ತರಬೇಕೆಂದರಲ್ಲದೆ ಮಕ್ಕಳ ಶೈಕ್ಷಣಿಕ ಸ್ಥಿತಿಗತಿಗಳನ್ನು ಮತ್ತಷ್ಟು ಉತ್ತಮಪಡಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link