ತುರುವೇಕೆರೆ
ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 9 ರಂದು ತುಮಕೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ರ್ಯಾಲಿಯಲ್ಲಿ ತಾಲ್ಲೂಕಿನ ಎಲ್ಲಾ ಶಿಕ್ಷಕರು ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲ್ಲೂಕು ಅಧ್ಯಕ್ಷ ಎಂ.ಬಸವರಾಜು ಕೋರಿದ್ದಾರೆ.
ಪಟ್ಟಣದ ಶಿಕ್ಷಕರ ಸಂಘ ಕಚೇರಿಯಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ವೃಂದ ಬಲದ ಆದೇಶದಂತೆ ಪ್ರಾಥಮಿಕ ಶಾಲಾ ಶಿಕ್ಷಕರು 1 ರಿಂದ 5 ವರ್ಗಕ್ಕೆ ಸೀಮಿತಗೊಳಿಸಿರುವುದು ಶಿಕ್ಷಕರಿಗೆ ಅನ್ಯಾಯವಾಗಿರುತ್ತದೆ. ಕೂಡಲೆ ಆದೇಶವನ್ನು ತಕ್ಷಣ ರದ್ದುಗೊಳಿಸಬೇಕು, ಹಾಲಿ ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು, ಕಳೆದ ಮೂರು ವರ್ಷದಿಂದ ಶಿಕ್ಷಕರು ವರ್ಗಾವಣೆ ಆಗದೆ ಇರುವುದರಿಂದ ಮೂರು ವರ್ಷದ ಒಟ್ಟು ಶೇಕಡಾವಾರು ಪರಿಗಣಿಸಿ ವರ್ಗಾವಣೆ ಪ್ರಕ್ರಿಯೆ ಆರಂಭಿಸಬೇಕು,
ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ ಹಾಗೂ ಯುಕೆಜಿ ಆರಂಭಿಸಬೇಕು, ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಗಳಲ್ಲಿರುವ ನ್ಯೂನತೆ ಸರಿಪಡಿಸಬೇಕು ಹಾಗೂ ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು, 6 ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸ್ಸಿನ ಪ್ರಕಾರ ವರ್ಷಗಳ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿ ತುಮಕೂರು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಸಾವಿರಾರು ಶಿಕ್ಷಕರು ರ್ಯಾಲಿಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಆದ್ದರಿಂದ ತಾಲ್ಲೂಕಿನ ಎಲ್ಲಾ ಶಿಕ್ಷಕರುಗಳು ಶಾಲೆಗಳನ್ನು ಬಂದ್ ಮಾಡಿ ತುಮಕೂರು ಎಂ.ಜಿ.ರಸ್ತೆಯಲ್ಲಿರುವ ಬಾಲಭವನ ಹತ್ತಿರ ಶಿಕ್ಷಕರ ಸಂಘದ ಕಚೇರಿ ಬರಬೇಕಾಗಿ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಷಣ್ಮುಖಪ್ಪ, ತಾಲ್ಲೂಕು ಗೌರವಾಧ್ಯಕ್ಷ ರಾಮಚಂದ್ರು, ತಾಲ್ಲೂಕು ಕಾರ್ಯದರ್ಶಿ ಸಿ.ಬಿ.ಸಿದ್ದರಾಮಯ್ಯ, ಖಜಾಂಚಿ ನಜೀರ್, ರಾಜ್ಯ ಉಪಾಧ್ಯಕ್ಷ ಎಂ.ಬಿ.ತಾತಯ್ಯ ಹಾಗೂ ಸಂಘದ ಎಲ್ಲ ಪದಾಧಿಕಾರಿಗಳು, ಶಿಕ್ಷಕರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
