ಡಿಸಿಗಳು ಕೋವಿಡ್ 19 ಪರೀಕ್ಷೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ವಹಿಸಿ : ಯಡಿಯೂರಪ್ಪ

ಬೆಂಗಳೂರು

     ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೋವಿಡ್ -19 ನಿಯಂತ್ರಣ ಹಾಗೂ ಪ್ರವಾಹಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

     ಜಿಲ್ಲಾಧಿಕಾರಿಗಳು ಕೋವಿಡ್ 19 ಪರೀಕ್ಷೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಪರೀಕ್ಷೆಗೆ ಅಗತ್ಯವಿರುವ ಕಿಟ್ ಗಳನ್ನು ಒದಗಿಸುವ ವ್ಯವಸ್ಥೆ ಮಾಡಲಾಗುವುದು. ಅಗತ್ಯವಿರುವ ವೈದ್ಯರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಪ್ರಯೋಗಾಲಯಗಳು ಕಡಿಮೆ ಇದ್ದಲ್ಲಿ ಪಕ್ಕದ ಜಿಲ್ಲೆಯಲ್ಲಿ ಮಾಡಿಸಲು ಕ್ರಮ ವಹಿಸಬೇಕು. ಬೂತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳು ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಬೇಕು. ಆಕ್ಸಿಜನ್ ಸಮಸ್ಯೆ ಇದ್ದರೆ ಹೆಚ್ಚು ಆಕ್ಸಿಜನ್ ಲಭ್ಯವಿರುವ ಜಿಲ್ಲೆಗಳಿಂದ ಪಡೆದುಕೊಳ್ಳಬೇಕು. ಮನೆ ಮನೆ ಸರ್ವೇ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಾಥಮಿಕ ಸಂಪರ್ಕವನ್ನು ಪತ್ತೆ ಹಚ್ಚಲು ಕ್ರಮ ವಹಿಸಬೇಕು. ಈಗಾಗಲೇ ಪಿ.ಜಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಕೌನ್ಸೆಲಿಂಗ್ ಮುಗಿದಿದ್ದು, ಇನ್ನೆರಡು ದಿನದಲ್ಲಿ 900 ಕ್ಕೂ ಹೆಚ್ಚು ತಜ್ಞ ವೈದ್ಯರನ್ನು ಜಿಲ್ಲೆಗಳಿಗೆ ನಿಯೋಜಿಸಲಾಗುವುದು. ರಾಜ್ಯದಲ್ಲಿ ಮರಣ ಪ್ರಮಾಣವನ್ನು ತಗ್ಗಿಸುವುದು ಆದ್ಯತೆಯಾಗಬೇಕು ಎಂದು ಯಡಿಯೂರಪ್ಪ ಸೂಚಿಸಿದರು.

      ದಸರಾ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಗೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ಸಾಧ್ಯತೆ ಇರುವುದರಿಂದ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಬೇಕಿದೆ. ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಯುವಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಆದ್ಯತೆ ನೀಡಬೇಕು. ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆಯ ಬಗ್ಗೆ ಗಮನ ಹರಿಸಬೇಕು.

     ಐ.ಸಿ.ಯುಗಳಲ್ಲಿ ವೆಂಟಿಲೇಟರ್ ಗಳ ಲಭ್ಯತೆಯ ಬಗ್ಗೆಯೂ ನಿಗಾ ವಹಿಸಬೇಕು. ಗೃಹ ನಿರ್ಬಂಧದಲ್ಲಿರುವವರ ಬಗ್ಗೆ ಮೇಲ್ವಿಚಾರಣೆ ಮಾಡುವುದನ್ನು ಸಹ ಪ್ರಮುಖವಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಾಜ್ಯದಲ್ಲಿ ಈ ಬಾರಿಯ ಪ್ರವಾಹದಿಂದ ಒಟ್ಟು 8071 ಕೋಟಿ ರೂ.ಗಳ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಕೇಂದ್ರ ತಂಡಕ್ಕೆ ಜಿಲ್ಲಾಧಿಕಾರಿಗಳು ಹಾನಿಯ ಪ್ರಮಾಣವನ್ನು ಮನವರಿಕೆ ಮಾಡಿಕೊಟ್ಟಿದ್ದು, ಕೇಂದ್ರದಿಂದ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ವರದಿಯನ್ನು ಸಲ್ಲಿಸಿಸಲಾಗಿದೆ. ರಾಜ್ಯ ದಲ್ಲಿ ಮತ್ತೆ ಮಳೆ ಪ್ರಾರಂಭವಾಗಿದ್ದು, ಇದರಿಂದಾಗಿರುವ ಹಾನಿಯನ್ನು ಸಹ ಅಂದಾಜು ಮಾಡಿ ಒಟ್ಟಾರೆ ಪರಿಹಾರದ ಮೊತ್ತವನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು.

    ಈಗಾಗಲೇ ಕೇಂದ್ರ ಅಧ್ಯಯನ ತಂಡವು ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಗಳಿಗೆ ಭೇಟಿ ನೀಡಿದೆ. ಮಳೆಯಿಂದ ಹಾನಿಗೊಳಗಾದ ಮನೆಗಳ ಪುನರ್ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಬೇಕು. ಕಳೆದ ಸಾಲಿನ ಪ್ರವಾಹದಲ್ಲಿನ ಹಾನಿಗೊಳಗಾದ ಮನೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪರಿಹಾರ ವಿತರಣೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಕ್ರಮ ಜರುಗಿಸಬೇಕು ಎಂದು ಹೇಳಿದರು.

    ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕು ಗೊಂಡ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಗೊಬ್ಬರದ ಕೊರತೆಯಾಗದಂತೆ ಎಚ್ಚರ ವಹಿಸಬೇಕು. ಜಿಲ್ಲಾಧಿಕಾರಿಗಳು ಹೆಚ್ಚಿನ ಆಸಕ್ತಿ ತೋರಿ ಶಕ್ತಿ ಮೀರಿ ಪರಿಸ್ಥಿತಿ ನಿಭಾಯಿಸಲು ಶ್ರಮಿಸಿದ್ದಾರೆ ವೆಂಟಿಲೇಟರ್ ಕೊರತೆ ಇಲ್ಲ ಎನ್ನುವುದು ಸಮಾಧಾನಕರ ವಿಷಯ. ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ತುರ್ತು ಪರಿಹಾರವನ್ನು ಕೈಗೊಳ್ಳಲು ಹಣದ ಲಭ್ಯತೆ ಇದೆ. ಮಳೆಯಿಂದ ಹಾನಿಗೊಳಗಾದ ರಸ್ತೆಗಳನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಿಸಿ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡಬೇಕು ತುರ್ತಾಗಿ ಕೈಗೊಳ್ಳಬೇಕಿರುವ ಕೆಲಸಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿ, ರೈತರಿಗೆ ಬೆಳೆ ಹಾನಿಗೆ ಪರಿಹಾರ ನೀಡಲು ಆದ್ಯತೆ ಮೇರೆಗೆ ಕೆಲಸ ಮಾಡಬೇಕು ವಿಶೇಷವಾದ ಸಂದರ್ಭದಲ್ಲಿವಾದ್ದರಿಂದ ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಯಡಿಯೂರಪ್ಪ ಹೇಳಿದರು.

     ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ:ಕೆ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ. ವಿ.ರಮಣರೆಡ್ಡಿ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap