ಇಂದಿನಿಂದ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ

ಹಾವೇರಿ

    ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್‍ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಇಂದಿನಿಂದ ಚುನಾವಣಾ ಅಧಿಸೂಚನೆ ಜಾರಿಗೊಂಡಿದೆ. ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಜಿಲ್ಲೆಯಾದ್ಯಂತ ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆಯನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಮಾಹಿತಿ ನೀಡಿ, ಹಾವೇರಿ, ಗದಗ, ಉತ್ತರ ಕನ್ನಡ ಹಾಗೂ ಧಾರವಾಡ ಜಿಲ್ಲೆಗಳನ್ನು ಒಳಗೊಂಡಿರುವ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಅಧಿಕಾರಿಯಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಕಾರ್ಯನಿರ್ವಹಿಸಲಿದ್ದಾರೆ. ಸಹಾಯಕ ಚುನಾವಣಾಧಿಕಾರಿಗಳಾಗಿ ನಾಲ್ಕು ಜಿಲ್ಲೆಗೆಳ ಜಿಲ್ಲಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲು ಸ್ಥಳ ನಿಗಧಿಪಡಿಸಲಾಗಿದೆ. ಧಾರವಾಡದಲ್ಲೇ ಮತ ಎಣಿಕೆ ಕಾರ್ಯ ಜರುಗಲಿದೆ ಎಂದು ತಿಳಿಸಿದರು.

    ಅಕ್ಟೋಬರ್ 1 ರ ಗುರುವಾರ ಅಧಿಸೂಚನೆ ಹೊರಡಿಸಲಾಗಿದ್ದು, ಇಂದೆ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಕೆಗೆ 8-10-2020 ಕೊನೆಯ ದಿನ, ದಿನಾಂಕ 9-10-2020 ರಂದು ನಾಮಪತ್ರಗಳ ಪರಿಶೀಲನೆ , ದಿನಾಂಕ 12-10-2020 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 28-10-2020 ರಂದು ಮತದಾನ ನಡೆಯಲಿದ್ದು, ದಿನಾಂಕ 2-11-2020 ರಂದು ಮತ ಎಣಿಕೆ ಕಾರ್ಯ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕೇವಲ ಎರಡು ಜನರಿಗೆ ಹಾಗೂ ಎರಡು ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪ್ರಚಾರ ಕಾರ್ಯಕ್ಕಾಗಿ ವಾಹನಗಳ ಮತ್ತು ಸಭೆ-ಸಮಾರಂಭಗಳ ಅನುಮತಿಯನ್ನು ಜಿಲ್ಲಾಧಿಕಾರಿಗಳಿಂದ ಪಡೆಯಬಹುದು ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಮತದಾನಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 37 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ತಾಲೂಕಾ ಮತ್ತು ಹೋಬಳಿ ಕೇಂದ್ರದಲ್ಲಿ ಮತಗಟ್ಟೆಗಳು ಗುರುತಿಸಲಾಗಿದೆ. ಮತಗಟ್ಟೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೇರಿದಂತೆ 209 ಜನರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

    ಕೋವಿಡ್ ಹಿನ್ನೆಲೆಯಲ್ಲಿ ಎಸ್‍ಓಪಿ ಮಾರ್ಗಸೂಚಿಯಂತೆ ಪ್ರತಿ ಮತಗಟ್ಟೆಗೂ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಲ್ಸ್ ಆಕ್ಸಿಮೀಟರುಗಳನ್ನು ಒದಗಿಸಲಾಗುವುದು. ಈ ಕಾರ್ಯಕ್ಕೆ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಲಾಗಿದೆ.

    ಪ್ರತಿ ತಾಲೂಕಿಗೆ ಮಾದರಿ ನೀತಿ ಸಂಹಿತೆ ಅನುಷ್ಠಾನ ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಎಲ್ಲ ಪ್ರವಾಸಿ ಮಂದರಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಟಿಂಗ್ ಮತ್ತು ಬ್ಯಾನರ್‍ಗಳನ್ನು ತೆರವುಗೊಳಿಸಲು ಕ್ರಮವಹಿಸಲಾಗಿದೆ. ನಿಗಮ –ಮಂಡಳಿಗಳ ಅಧ್ಯಕ್ಷರುಗಳಿಗೆ ನೀಡಲಾಗಿದ್ದ ವಾಹನಗಳನ್ನು ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ಕೋವಿಡ್ ಸೋಂಕಿತರಿಗೆ, ದಿವ್ಯಾಂಗ ಹಾಗೂ 80 ವರ್ಷಕ್ಕಿಂತ ಮೇಲ್ಪಟ್ಟ ಮತದಾರರಿಗೆ ಅಂಚೆ ಮೂಲಕ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶ ಪಡೆಯಲು ಚುನಾವಣಾ ಅಧಿಸೂಚನೆ ಪ್ರಕಟವಾದ ಐದು ದಿನಗಳ ಒಳಗಾಗಿ ತಮ್ಮ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳಿಗೆ(ಜಿಲ್ಲಾಧಿಕಾರಿಗಳಿಗೆ) ನಮೂನೆ 12-ಡಿ ಮೂಲಕ ಕೋರಿಕೆ ಸಲ್ಲಿಸಬೇಕು. ಈ ಕೊರಿಕೆಯ ಜೊತೆಗೆ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು.

    ಜಿಲ್ಲೆಯಲ್ಲಿ 16,052 ಪುರುಷ, 7218 ಮಹಿಳಾ ಹಾಗೂ ನಾಲ್ಕು ಇತರೆ ಮತದಾರರು ಸೇರಿ 23,274 ಮತದಾರರಿದ್ದಾರೆ. ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕಾರ್ಯವು ಜಿಲ್ಲೆಯ ಎಲ್ಲ ತಹಶೀಲ್ದಾರಗಳ ಕಚೇರಿಯಲ್ಲಿ ನಡೆಯಲಿದೆ. ಪ್ರತಿ ಮತದಾರರಿಗೆ ಮಾಸ್ಕ್ ಹಾಗು ಪ್ರತ್ಯೇಕ ನೇರಳೆ ಬಣ್ಣದ ಸ್ಕೆಚ್ ಪೆನ್ ಒದಗಿಸಲಾಗುವುದು. ಚುನಾವಣಾ ಸಿಬ್ಬಂದಿಗಳಿಗೆ ಎರಡು ಹಂತದಲ್ಲಿ ತರಬೇತಿ ನೀಡಲಾಗುವುದು. ಮೊದಲ ಹಂತದಲ್ಲಿ ಕೇವಲ ಪಿಆರ್‍ಓ ಹಾಗೂ ಏ.ಪಿ.ಆರ್.ಓಗಳಿಗೆ ಮತ್ತು ಎರಡನೇ ಹಂತದಲ್ಲಿ ತಂಡದ ಎಲ್ಲ ಸದಸ್ಯರುಗಳಿಗೆ ನೀಡಲಾಗುವುದು.

    ಈ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ನೀತಿ ಸಂಹಿತೆ ತಂಡಗಳನ್ನು ರಚಿಸಿ ನಿಗಾ ವಹಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 08375-249102 ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

    ಬಂದೋಬಸ್ತ್ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಅವರು ಮಾಹಿತಿ ನೀಡಿ, ಚುನಾವಣಾ ಅಕ್ರಮಗಳ ತಡೆಗೆ ಸೂಕ್ತ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಮತಗಟ್ಟೆಗಳಿಗೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತಿದೆ. ಚೆಕ್‍ಪೋಸ್ಟ್ ವ್ಯವಸ್ಥೆ ಇರುವುದಿಲ್ಲ ಎಂದು ವಿವರಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಚುನಾವಣಾ ತಹಶೀಲ್ದಾರ ಪ್ರಶಾಂತ ನಾಲವಾರ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link