ತಕ್ಷಣ ಮನೆಕಳೆದುಕೊಂಡವರಿಗೆ ಮನೆ, ಬೆಳೆಹಾನಿಗೆ ಪರಿಹಾರ : ಸಿಎಂ ಬಿಎಸ್‍ವೈ

ಬಳ್ಳಾರಿ

     ಕಲಬುರಗಿ, ಯಾದಗಿರಿ, ವಿಜಯಪುರ ಪ್ರದೇಶಗಳಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ತಕ್ಷಣ ಮನೆ ನಿರ್ಮಿಸಿಕೊಳ್ಳಲು ಪರಿಹಾರ ಹಾಗೂ ಬೆಳೆಹಾನಿಗೆ ಪರಿಹಾರ ಒದಗಿಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

    ಪ್ರವಾಹಪೀಡಿತ ಪ್ರದೇಶಗಳಿಗೆ ವೈಮಾನಿಕ ಸಮೀಕ್ಷೆ ಮೂಲಕ ಪರಿಸ್ಥಿತಿಯನ್ನು ವೀಕ್ಷಿಸಲು ತೆರಳುವುದಕ್ಕೆ ಬೆಂಗಳೂರಿನಿಂದ ಬಳ್ಳಾರಿ ಜಿಂದಾಲ್ ವಿಮಾನ್ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಲಬುರಗಿ, ವಿಜಯಪುರ ಭಾಗಗಳಲ್ಲಿ ವೈಮಾನಿಕ ಸಮೀಕ್ಷೆ ಮಾಡಲು ಇಂದು ತೆರಳುತ್ತಿದ್ದು, ಅತಿವೃಷ್ಠಿಯಿಂದ ಮನೆಗಳ ಹಾನಿ, ಬೆಳೆಹಾನಿ ಹಾಗೂ ಇನ್ನೀತರ ಸಮಸ್ಯೆಗಳೇನಾಗಿವೆ ಅವುಗಳನ್ನು ಪರಿಶೀಲಿಸಲು ತೆರಳುತ್ತಿದ್ದೇವೆ;ಅಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ.ಇನ್ನೂ ಅಗತ್ಯವಿರುವ ಹಣ ಬಿಡುಗಡೆ ಮಾಡಿ ತಕ್ಷಣ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣ ಮಾಡುವುದಕ್ಕೆ ಮತ್ತು ಬೆಳೆಹಾನಿಗೆ ಪರಿಹಾರ ಒದಗಿಸುವುದಕ್ಕೆ ಕ್ರಮವಹಿಸಲಾಗುವುದು ಎಂದರು.

    ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೂ ಈ ಕುರಿತು ಚರ್ಚಿಸಲಾಗಿದೆ. ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಅಧಿಕಾರಿಗಳಿಗೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಕ್ಕೆ ಸಭೆ ನಡೆಸಿ ಸೂಚನೆ ನೀಡಲಾಗುವುದು ಎಂದರು.
ಸಂಪೂರ್ಣ ವರದಿಯನ್ನು ಕೇಂದ್ರ ಸರಕಾರಕ್ಕೆ ಇನ್ನೂ ನಾಲ್ಕೈದು ದಿನಗಳಲ್ಲಿ ಸಲ್ಲಿಸಲಾಗುವುದು;ನಂತರ ಕೇಂದ್ರ ತಂಡ ಭೇಟಿ ನೀಡಿ ಪರಿಶೀಲಿಸಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಬಳ್ಳಾರಿಯ ತೋರಣಗಲ್ಲುವಿನ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ಪಶುಸಂಗೋಪನಾ ಸಚಿವರಾದ ಪ್ರಭು ಚವ್ಹಾಣ ಅವರೊಂದಿಗೆ ಬಂದಿಳಿದ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಐಜಿಪಿ ನಂಜುಂಡಸ್ವಾಮಿ, ಜಿಪಂ ಸಿಇಒ ಕೆ.ಆರ್.ನಂದಿನಿ, ಎಸ್ಪಿ ಸೈದುಲು ಅಡಾವತ್ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಇತರೆ ಗಣ್ಯವ್ಯಕ್ತಿಗಳು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link