ಬೆಂಗಳೂರು
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಮ್ಮ ಬೇಡಿಗಳಿಗೆ ಸ್ಪಂದಿಸದಿದ್ದರೆ ಹಂತ ಹಂತವಾಗಿ ವೈದ್ಯಕೀಯ ಸೇವೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಶ್ರೀ ರಾಮುಲು ಅವರಿಗೆ ಮನವಿ ಸಲ್ಲಿಸಿತ್ತು. ಆದರೆ ಈವರೆಗೂ ಈಡೇರಿಕೆಯಾಗಿಲ್ಲ ಎಂದು ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮ್ಮ ವಿವಿಧ ಬೇಡಿಕೆಗಳನ್ನು ಒಂದು ವಾರದಲ್ಲಿ ಈಡೇರಿಸದಿದ್ದರೆ ಸೆಪ್ಟೆಂಬರ್ 15ರ ನಂತರ ಹಂತ ಹಂತವಾಗಿ ತಮ್ಮ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಗುತ್ತಿಗೆ ನೌಕರರು ಮತ್ತು ಆಯುಷ್ ವೈದ್ಯರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ಸರ್ಕಾರ ಅವರ ಬೇಡಿಕೆ ಈಡೇರಿಸಿತ್ತು. ಆಗ ಸರ್ಕಾರಿ ವೈದ್ಯರು ಸಹ ವೇತನ ಹೆಚ್ಚಳ ಮಾಡಬೇಕು ಎಂದು ಮನವಿ ಸಲ್ಲಿಸಿದ್ದರು.
ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಬಳಿಕ ಸರ್ಕಾರಿ ವೈದ್ಯರು ಮತ್ತೊಮ್ಮೆ ತಮ್ಮ ಬೇಡಿಕೆ ಈಡೇರಿಸಲು ಸರ್ಕಾರವನ್ನು ಒತ್ತಾಯಿಸಿದ್ದರು. ಆಗ ಸರ್ಕಾರ ಭರವಸೆ ನೀಡಿದ್ದರೂ ಬೇಡಿಕೆ ಇನ್ನೂ ಈಡೇರಿಲ್ಲ. ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆಪ್ಟೆಂಬರ್ 15ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸುತ್ತೇವೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
