ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ…!

ಬೆಂಗಳೂರು

    ದಕ್ಷಿಣ ಒಳನಾಡಿನಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ತುಮಕೂರಿನಲ್ಲಿ ಹೆಚ್ಚಿನ ಮಳೆಯಾಗಲಿದೆ. ಭಟ್ಕಳ, ಖಜುರಿ, ಹಾಸನ, ಚಿಕ್ಕಮಗಳೂರು, ಎಲೆಕ್ಟ್ರಾನಿಕ್ ಸಿಟಿ, ಮುಂಡಗೋಡು, ಹೊಳೆನರಸೀಪುರ, ಶ್ರೀರಂಗಪಟ್ಟಣ, ಮಳವಳ್ಳಿಯಲ್ಲಿ ಮಳೆಯಾಗಿದೆ.

    ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು, ಕರಾವಳಿ ಪ್ರದೇಶ, ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ. ಬುಧವಾರ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ, ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣ ಮಳೆ ಮತ್ತು ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

   ಇನ್ನು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮತ್ತು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, ಮುಂದಿನ 48 ಗಂಟೆಗಳ ಕಾಲ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಹಾನಗರ ವ್ಯಾಪ್ತಿಯಲ್ಲಿ ಚದುರಿದಂತೆ ಗುಡುಗು ಸಹಿತ ಸಾಧಾರಣ ಮಳೆ ಸುರಿಯುವ, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆದಿದ್ದು, ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ