ತುಮಕೂರು
ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ತಂಬಾಕು ವಸ್ತುಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಭೆಯಲ್ಲಿ ಮಾತನಾಡಿದ ಅವರು, ತಹಶೀಲ್ದಾರ್, ಪೊಲೀಸ್ ಇನ್ಸ್‍ಪೆಕ್ಟರ್, ಬಿಇಒ, ತಾಲ್ಲೂಕು ಆರೋಗ್ಯಾ ಧಿಕಾರಿಗಳು ಜಂಟಿಯಾಗಿ ಶಾಲೆಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಶೇ. 100ರಷ್ಟು ತಂಬಾಕು ವಸ್ತುಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿರುವ ಕುರಿತು ಮುಂದಿನ ಸಭೆಯಲ್ಲಿ ದೃಢೀಕೃತ ವರದಿಯನ್ನು ನೀಡುವಂತೆ ಅವರು ಸೂಚನೆ ನೀಡಿದರು.
ಅಲ್ಲದೇ ಐಇಸಿ(ಮಾಹಿತಿ, ಶಿಕ್ಷಣ, ಮತ್ತು ಸಂವಹನ) ಕಾರ್ಯಕ್ರಮದಡಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಓದುವ ವಿದ್ಯಾರ್ಥಿಗಳಿರುವ ಶಾಲೆ ಮತ್ತು ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವಿನ ಪ್ರಚಾರ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ತಾಲ್ಲೂಕು ತಹಶಿಲ್ದಾರರು ತಂಬಾಕು ಮಾರಾಟಗಾರರ ಮೇಲೆ ದಾಳಿ ನಡೆಸಿ ವ್ಯಾಪಾರ ಪರವಾನಗಿಯನ್ನು ರದ್ದುಗೊಳಿಸಿಸಬೇಕು ಎಂದು ಅವರು ಸೂಚನೆ ನೀಡಿದರು.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ, ಡಿವೈಎಸ್‍ಪಿ ತಿಪ್ಪೇಸ್ವಾಮಿ, ಆರ್.ಸಿ.ಎಚ್ ಅಧಿಕಾರಿ ಡಾ. ಕೇಶವರಾಜ್, ಡಾ: ಪುರುಷೋತ್ತಮ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ