ಬೆಂಗಳೂರು
ಸಾರಿಗೆ ಸಂಸ್ಥೆ ಬಸ್ ಪ್ರಯಾಣದರ ಏರಿಕೆ ಸಧ್ಯಕ್ಕಿಲ್ಲ. ಬಹುತೇಕ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಉಪ ಚುನಾವಣೆ ನಂತರ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಇಂದು ಸಾರಿಗೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಆದರೆ ಪ್ರಯಾಣ ದರ ಏರಿಕೆಗೆ ಅನುಮತಿ ನೀಡಿಲ್ಲ.
ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಕುಮಾರ ಸ್ವಾಮಿ, ಬಸ್ ದರ ಹೆಚ್ಚಿಸುವ ಬಗ್ಗೆ ಸಾರ್ವಜನಿಕ ಅಭಿಪ್ರಾಯಗಳನ್ನು ಪಡೆದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಬಸ್ ಪ್ರಯಾಣ ದರ ಹೆಚ್ಚಿಸದೇ ನಷ್ಟವನ್ನು ಸರಿದೂಗಿಸಲು ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಲು ಆದ್ಯತೆ ನೀಡಬೇಕು. ಇದರಿಂದ ಜನ ಸಾಮಾನ್ಯರಿಗೂ ಹೊರೆ ತಪ್ಪಲಿದ್ದು, ಈ ಸಲಹೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಾರಿಗೆ ಇಲಾಖೆಯಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ರಾಜಸ್ವ ಸಂಗ್ರಹಣೆಯಲ್ಲಿ 131 ಕೋಟಿ ರೂ. ಹೆಚ್ಚಳವಾಗಿದ್ದು , ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಪ್ರಯಾಣಿಕರ ಆಶಯಗಳನ್ನು ಅರ್ಥೈಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಮೆಟ್ರೋ ರೈಲಿನೊಂದಿಗೆ ಸಮನ್ವಯ ಸಾಧಿಸುವತ್ತ ಗಮನ ಹರಿಸಬೇಕು. ಪ್ರಯಾಣಕರಿಗೆ ಬಸ್ ಸೌಲಭ್ಯ ಮಾತ್ರವಲ್ಲದೆ ಅವರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಪ್ರಯಾಣಿಕರಿಗೆ ಹೊರೆಯಾಗದಂತೆ ಇಲಾಖೆಯ ನಷ್ಟವನ್ನು ಸರಿದೂಗಿಸಲು ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.
ಸಭೆಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|| ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ|| ಇ .ವಿ. ರಮಣರೆಡ್ಡಿ , ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಬಸವರಾಜು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








