ಬೆಂಗಳೂರು
ನವರಾತ್ರಿ, ದಸರಾ ಮಹೋತ್ಸವ ಸಂದರ್ಭದಲ್ಲಿ ಸಾಂಪ್ರದಾಯಿಕ ಹುಲಿವೇಷ ಸಂಪ್ರದಾಯ ಕೈಗೊಳ್ಳುವಾಗ ಕೋವಿಡ್ 19 ಸೋಂಕು ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದರೆ ದೇವಸ್ಥಾನಗಳ ಆಡಳಿತ ಮಂಡಳಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಹುಲಿವೇಷಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್‍ಗೆ ಷರತ್ತು ಬದ್ಧ ಅನುಮತಿ ನೀಡಿದ್ದು, ಷರತ್ತುಗಳನ್ನು ಉಲ್ಲಂಘನೆ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.ಕೋವಿಡ್ ಸೋಂಕಿಗೆ ಒಳಗಾಗಿ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರ ಜತೆ ಧಾರ್ಮಿಕ ಪರಿಷತ್ ಸದಸ್ಯರು ದೂರವಾಣಿ ಮೂಲಕ ಮಾತುಕತೆ ನಡೆಸಿ ಹುಲಿವೇಷಕ್ಕೆ ಷರತ್ತುಬದ್ಧ ಅನುಮತಿ ಪಡೆದುಕೊಂಡಿದ್ದಾರೆ.
ದಸರಾ ಸಂದರ್ಭ ದೇವಸ್ಥಾನದ ಆವರಣದಲ್ಲಿ ಮಾತ್ರ ಹುಲಿವೇಷ ಪ್ರದರ್ಶನ ನೀಡಬೇಕಿದ್ದು, ಒಂದು ತಂಡದಲ್ಲಿ ಗರಿಷ್ಠ ಹತ್ತು ಹುಲಿ ವೇಷಧಾರಿಗಳು ಮಾತ್ರ ಇರಬೇಕು. ನಿಗದಿತ ಕಾಲಮಿತಿಯಲ್ಲಿ ಹರಕೆ ಅರ್ಪಿಸಬೇಕು. ಹರಕೆ ಸಲ್ಲಿಸುವಾಗ ಅಥವಾ ಉಳಿದ ಸಂದರ್ಭಗಳಲ್ಲಿ ಕಡ್ಡಾಯವಾಗಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್ ಅಥವಾ ಸೋಪು ಬಳಕೆಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.
ಕೋವಿಡ್ 19 ಸೋಂಕು ನಿಯಂತ್ರಣಃ ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ಹಾಗೂ ಅಹಿತಕರ ಘಟನೆ ಸಂಭವಿಸಿದಂತೆ ದೇವಾಲಯದ ಆಡಳಿತ ಮಂಡಳಿ ನೋಡಿಕೊಳ್ಳಬೇಕು. ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ಒಂದಾಗಿರುವ ದಕ್ಷಿಣ ಕನ್ನಡದಲ್ಲಿ ಸೋಂಕು ನಿಯಂತ್ರಣ ಕ್ರಮಗಳನ್ನು ಪರಿಪಾಲನೆ ಮಾಡುವುದು ಕಡ್ಡಾಯವಾಗಿದೆ ಎಂದು ಸೂಚಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ