ಚಿತ್ರದುರ್ಗ :
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.13 ರಂದು ಜಿಲ್ಲಾ ಕೇಂದ್ರದಲ್ಲಿ ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .
ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅಂದು ಬೆ.9-30 ಕ್ಕೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರೆವಣಿಗೆ ನಗರದ ಕನಕ ವೃತ್ತದಿಂದ ಆರಂಭವಾಗಿ ಗಾಂಧಿ ವೃತ್ತ ಮಾರ್ಗವಾಗಿ ಮದಕರಿ ವೃತ್ತದವರೆಗೆ ನಡೆಯಲಿದೆ.ಮೆರವಣಿಗೆಯಲ್ಲಿ ವಿವಿಧ ಸಾಂಸ್ಕøತಿಕ ಕಲಾತಂಡಗಳು ಪಾಲ್ಗೊಳ್ಳಲಿವೆ. ಮಧ್ಯಾಹ್ನ 01 ಗಂಟೆಗೆ ನಗರದ ತ.ರಾ.ಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲು ಬೆಂಗಳೂರು ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾದ ಸಿ.ಬಿ. ಅನ್ನಪೂರ್ಣ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅಂದು ಬೆಳಿಗ್ಗೆ ಜರುಗುವ ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ವಾಹನ ಸಂಚಾರ ನಿಯಂತ್ರಣ ಹಾಗೂ ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಶಿಷ್ಠಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು.
ವೇದಿಕೆಯಲ್ಲಿ ಸೂಕ್ತ ಆಸನದ ವ್ಯವಸ್ಥೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಜನರಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಅಲಂಕಾರ ಹೀಗೆ ಕಾರ್ಯಕ್ರಮದಲ್ಲಿ ಎಲ್ಲವೂ ಅಚ್ಚುಕಟ್ಟುತನ ಇರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯಭಾಮ, ಉಪವಿಭಾಗಾಧಿಕಾರಿ ಪ್ರಸನ್ನ ಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಜೆ, ರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ತಾಲ್ಲೂಕು ಅಧ್ಯಕ್ಷ ಕಾಂತರಾಜ್, ಮದಕರಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸಂದೀಪ್ ಸೇರಿದಂತೆ ವಿವಿಧ ಸಮಾಜದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ