ಚಿತ್ರದುರ್ಗ
ಅಧಿಕಾರಿಗಳು, ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗಳಿಗೆ ಖುದ್ದು ಭೇಟಿ ನೀಡಿ, ಅಲ್ಲಿನ ವಾಸ್ತವತೆಯನ್ನು ಅರಿತು, ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಬರ ಪರಿಹಾರ ಕಾರ್ಯಗಳು ಹಾಗೂ ಕುಡಿಯುವ ನೀರಿನ ಸ್ಥಿತಿಗತಿ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲೆ ಬರ ಪೀಡಿತ ಪ್ರದೇಶವಾಗಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ತೀವ್ರ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕಚೇರಿಯಲ್ಲಿ ಕುಳಿತು ನಿರ್ಧಾರ ಕೈಗೊಳ್ಳುವುದನ್ನು ಸಹಿಸುವುದಿಲ್ಲ. ಚುನಾವಣಾ ಕಾರ್ಯಗಳ ನಡುವೆಯೂ, ಹಳ್ಳಿಗಳಿಗೆ ಭೇಟಿ ನೀಡಿ, ಅಲ್ಲಿನ ವಾಸ್ತವ ಸ್ಥಿತಿಗತಿಯನ್ನು ಅರಿತು, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸದ್ಯ ಜಿಲ್ಲೆಯ 145 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿರುವುದಾಗಿ ವರದಿ ಸಲ್ಲಿಸಲಾಗಿದೆ. ಆದರೆ ಇದೇ ಶಾಶ್ವತ ಪರಿಹಾರವಲ್ಲ. ಪರ್ಯಾಯ ನೀರಿನ ಮೂಲಗಳು ಹಾಗೂ ಖಾಸಗಿ ಬೋರ್‍ವೆಲ್‍ಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯುವ ಕ್ರಮಗಳನ್ನು ಕೈಗೊಳ್ಳಬೇಕು ಅದರ ಜೊತೆಗೆ ನೀರು ಪೂರೈಸುವ ಟ್ಯಾಂಕರ್‍ಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು.
ಯಾವ ಕಾರಣಕ್ಕಾಗಿ ಟ್ಯಾಂಕರ್ ಮೂಲಕ ಒದಗಿಸಲಾಗುತ್ತಿದೆ ಎಂಬುದಕ್ಕೆ ಸಕಾರಣಗಳನ್ನು ನೀಡಬೇಕು.
ಟ್ಯಾಂಕರ್ ಮೂಲಕ ನೀರು ಪೂರೈಸುವ ಕುರಿತಂತೆ ಸರ್ಕಾರ ನಿಗದಿಪಡಿಸಿರುವ ಎಲ್ಲ ಮಾರ್ಗಸೂಚಿಗಳನ್ನು ಅಧಿಕಾರಿಗಳು ತಪ್ಪದೆ ಪಾಲಿಸಬೇಕು, ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಆರ್‍ಒ ಘಟಕಗಳ ವರದಿ ಸಲ್ಲಿಸಿ :
ಜಿಲ್ಲೆಯಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಸಲುವಾಗಿ 1063 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದ್ದು, ಈ ಪೈಕಿ ಎಷ್ಟು ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಎಷ್ಟು ಸ್ಥಗಿತಗೊಂಡಿವೆ ಹಾಗೂ ಅವುಗಳ ಸ್ಥಿತಿಗತಿಗಳ ಕುರಿತು ವರದಿಯನ್ನು ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ. ಸತ್ಯಭಾಮ ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಕೂಡಲೆ ಕೆಲಸ ನೀಡಲಾಗುತ್ತಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಈಗಾಗಲೆ 270290 ನೊಂದಾಯಿತ ಜಾಬ್ ಕಾರ್ಡ್‍ಗಳನ್ನು ನೀಡಲಾಗಿದ್ದು, ಈ ಎಲ್ಲ ಕೂಲಿ ಕಾರ್ಮಿಕರು ಉದ್ಯೋಗ ಹುಡುಕಿಕೊಂಡು, ಬೇರೆ ಸ್ಥಳಗಳಿಗೆ ಗುಳೆ ಹೋಗುವ ಅಗತ್ಯವಿರುವುದಿಲ್ಲ.
ನರೇಗಾ ಯೋಜನೆಯಡಿ ಅದೇ ಗ್ರಾಮಗಳಲ್ಲಿಯೇ ನೈಸರ್ಗಿಕ ಜಲಸಂಪನ್ಮೂಲ ಕಾಮಗಾರಿಗಳನ್ನು ನೀಡಲಾಗುತ್ತಿದ್ದು, ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಮೂನೆ-6 ಭರ್ತಿ ಮಾಡಿ, ಅರ್ಜಿ ಸಲ್ಲಿಸಿದಲ್ಲಿ, ಕೂಡಲೆ ಕೂಲಿ ಕೆಲಸ ನೀಡಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯಕುಮಾರ್ ಸೇರಿದಂತೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸಿಲ್ದಾರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.